ಬೆಂಗಳೂರು: ನಾನು ಚನ್ನಪಟ್ಟಣ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಪ್ರಬಲ ಆಕಾಂಕ್ಷಿ. ಅಲ್ಲಿ ಸ್ಪರ್ಧಿಸುವಂತೆ ಜನರೂ ಕೂಡ ಒತ್ತಡ ಹಾಕುತ್ತಿದ್ದಾರೆ. ನಾವೆಲ್ಲರೂ ಸಮಾನಮನಸ್ಕರ ಸಭೆ ಸೇರಿ ಈಗಾಗಲೇ ನಿರ್ಣಯ ಮಾಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಬಿಜೆಪಿ ವತಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುವೆ. ಈ ವಿಚಾರವಾಗಿ ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ ಎಂದರು.
ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ. ಯಾವುದೇ ಚಿಹ್ನೆಯಡಿ ನಿಂತರೂ ಗೆಲ್ಲಿಸುತ್ತಾರೆ. ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಬಾರದು. ಆ ಕ್ಷೇತ್ರವನ್ನು ಎನ್‌ಡಿಎ ವಶಕ್ಕೆ ತೆಗೆದುಕೊಳ್ಳಬೇಕು ಎಂದು ನಿರ್ಣಯಿಸಿದ್ದೇವೆ. ಹಾಗಾಗಿ, ನಾನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮನಸ್ಸು ಮಾಡಿದ್ದೇನೆ. ಅದಕ್ಕಾಗಿ ದೆಹಲಿಗೆ ತೆರಳುತ್ತಿದ್ದೇನೆ. ಅಲ್ಲಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ. ಆಗಸ್ಟ್ 16ರಂದು ಮತ್ತೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುವ ಯೋಜನೆಯೂ ಇದೆ ಎಂದು ತಿಳಿಸಿದರು.
ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚಿಸಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿ.ಕೆ.ಶಿವಕುಮಾರ್ ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕೆಂದು ಗೊತ್ತಿದೆ ಎಂದು ಹೇಳಿದರು.