ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಕಡೆಗಳಲ್ಲಿ ಬೀಳುತ್ತಿರುವ ಮಳೆ ಇನ್ನೂ ಎರಡು-ಮೂರು ದಿನಗಳ ಕಾಲ ಮತ್ತಷ್ಟು ಬಿರುಸುಗೊಳ್ಳಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಸೇರಿ ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕೋಲಾರ, ರಾಮನಗರ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಕೊಪ್ಪಳ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ನಗರದಲ್ಲಿ 29.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ:ಜೋರಾಗಲಿದೆ ಹಿಂಗಾರು ಆರ್ಭಟ: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ