ಮೈಸೂರು:ಆಷಾಢ ಮಾಸದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ವ್ಯಾಪಕ ಮಳೆಗೆ ಹಳೇ ಮೈಸೂರು ಭಾಗದ ಪ್ರಮುಖ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿದೆ. ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗಿದೆ. ಭಾರಿ ಮಳೆಯ ಹಿನ್ನೆಲೆ ಮೈಸೂರು ಜಿಲ್ಲೆ, ಮಂಡ್ಯ, ಚಾಮರಾಜನಗರ ಹಾಗೂ ಮಡಿಕೇರಿಗಳಲ್ಲಿ ಇರುವ ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ಡ್ಯಾಂಗಳು ಭರ್ತಿಯಾಗುವ ಮುನ್ಸೂಚನೆ ಕಂಡು ಬರುತ್ತಿದೆ.
ಕಬಿನಿ ಜಲಾಶಯ ಬಹುತೇಕ ಭರ್ತಿ:ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದೆ. ಜಲಾಶಯದಿಂದ 24 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಅದರಲ್ಲಿ 8 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ. ಕಬಿನಿ ಜಲಾಶಯದ ಗರಿಷ್ಠ ಮಟ್ಟ 84 ಅಡಿಗಳಾಗಿದ್ದು, ಈ ಜಲಾಶಯ ಬಹುತೇಕ ಭರ್ತಿಯಾಗಿದೆ. ಜಲಾಶಯದಿಂದ ನದಿ ಪಾತ್ರಕ್ಕೆ 24 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಜಲಾಶಯದ ಮುಂಭಾಗ ಇರುವ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ನಂಜನಗೂಡಿನ ಬಳಿಯ ಸ್ನಾನ ಘಟ ಮುಳುಗಡೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದ ಜನರಿಗೆ ಸೂಚನೆ ನೀಡಲಾಗಿದ್ದು, ಯಾರೂ ಸಹ ನದಿ ಪಾತ್ರದಲ್ಲಿ ಬರಬಾರದು, ಜಾನುವಾರು ಬಿಡಬಾರದು ಎಂದು ಮುನ್ನಚ್ಚರಿಕೆ ಕೊಡಲಾಗಿದೆ.
ಕೇರಳದ ವೈಯಾನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುವ ಸಂಭವ ಇದ್ದು, ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಾಧ್ಯತೆ ಇದೆ ಎಂದು ಕಬಿನಿ ಜಲಾಶಯದ ಇ.ಇ. ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಎಡೆಬಿಡದೆ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಹೆಚ್.ಡಿ.ಕೋಟೆ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ.