ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಡಿ‌.27ರಂದು 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಸಮಾವೇಶ: ಡಿ.ಕೆ.ಶಿವಕುಮಾರ್ - CONGRESS SESSION CENTENARY

ಡಿ.26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು ವೀರಸೌಧ ಬಳಿಯ ಗಾಂಧಿ ಬಾವಿ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

By ETV Bharat Karnataka Team

Published : 24 hours ago

ಬೆಳಗಾವಿ: "ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಡಿ.27ರಂದು ನಡೆಯಲಿರುವ ಸಾರ್ವಜನಿಕ ಸಮಾವೇಶಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರಿಡಲಾಗಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿ ಕ್ಲಬ್ ರಸ್ತೆಯ ಸಿಪಿಇಡ್ ಮೈದಾನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾವೇಶ ನಡೆಯಲಿರುವ ಈ ಪ್ರದೇಶವನ್ನು 'ಮಹಾತ್ಮ ಗಾಂಧೀಜಿ ನವನಗರ' ಎಂದು ಘೋಷಣೆ ಮಾಡಿದ್ದೇವೆ. 26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ವೀರಸೌಧ ಬಳಿಯ ಗಾಂಧಿ ಬಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ" ಎಂದರು.

"1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಗಾಂಧಿ ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಚಾರ. ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್​ಲಾಲ್ ನೆಹರು ಅವರು ಅಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರೂ ಸೇರಿ ಬೆಳಗಾವಿಯಲ್ಲಿ ಈ ಅಧಿವೇಶನ ಮಾಡಿದ್ದರು. ಅಂದು 80 ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ" ಎಂದು ಹೇಳಿದರು.

"ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು, ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಹಾಲಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ಸಂಸತ್ ಸದಸ್ಯರು, ಶಾಸಕರು, ರಾಜ್ಯದ ವಿವಿಧೆಡೆ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದೇವೆ" ಎಂದು ತಿಳಿಸಿದರು.

"1924ರ ಅಧಿವೇಶನದ ದಾಖಲೆಗಳನ್ನು ಸಂಗ್ರಹಿಸಿದ್ದು, ಅದನ್ನು ಪುಸ್ತಕ ಮಾಡಿ ನಾಳೆ ಬಿಡುಗಡೆ ಮಾಡುತ್ತಿದ್ದೇವೆ. 26ರಂದು ಬೆಳಗ್ಗೆ 10 ಗಂಟೆಗೆ ವೀರಸೌಧದಲ್ಲಿ ಗಾಂಧಿ ಅವರ ಪುತ್ಥಳಿ ಅನಾವರಣ ಮಾಡಲಾಗುವುದು. ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಬೆಳಗ್ಗೆ 10.45ಕ್ಕೆ ಖಾದಿ ಮೇಳವನ್ನು ಉದ್ಘಾಟನೆ ಮಾಡಲಾಗುವುದು. 11.15ಕ್ಕೆ ಗಂಗಾಧರ ದೇಶಪಾಂಡೆ ಅವರ ಸ್ಮಾರಕವನ್ನು ನಾನು ಹಾಗೂ ಮುಖ್ಯಮಂತ್ರಿಗಳು ಅನಾವರಣ ಮಾಡಲಿದ್ದೇವೆ. ನಂತರ ಗಂಗಾಧರ ದೇಶಪಾಂಡೆ ಅವರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಮಧ್ಯಾಹ್ನ 3 ಗಂಟೆಗೆ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ರಾತ್ರಿ 7ಕ್ಕೆ ಎಐಸಿಸಿ ಅಧ್ಯಕ್ಷರಿಂದ ಭೋಜನಕೂಟ ಏರ್ಪಡಿಸಲಾಗಿದೆ" ಎಂದು ಮಾಹಿತಿ ನೀಡಿದರು.

"27ರಂದು ಬೆಳಗ್ಗೆ 10.30ಕ್ಕೆ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆಯನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಅನಾವರಣಗೊಳಿಸಲಿದ್ದಾರೆ. ಮುಖ್ಯಮಂತ್ರಿಗಳು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಭಾಧ್ಯಕ್ಷ ಯು.ಟಿ ಖಾದರ್ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಖಂಡತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಪಕ್ಷದ ನಾಯಕರಿಗೆ ಆಹ್ವಾನ ನೀಡಲಾಗುವುದು. ಸ್ಥಳೀಯ ನಾಯಕರು, ರಾಜ್ಯದ ಎಲ್ಲಾ ಸಂಸದರನ್ನು ನಾವು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. 12 ಗಂಟೆಗೆ ಮುಖ್ಯಮಂತ್ರಿಗಳಿಂದ ಔತಣಕೂಟ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಮಾವೇಶ ನಡೆಯಲಿದೆ" ಎಂದರು.

ಜನರು ದೀಪಾಲಂಕಾರ ಕಣ್ತುಂಬಿಕೊಳ್ಳಬೇಕು: "1904ರಲ್ಲಿ ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಆರಂಭವಾಗಿದ್ದು, 1924ರಲ್ಲಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿತ್ತು. ಅದರ ಫೋಟೋಗಳು ನಮ್ಮ ಬಳಿ ಇದೆ. ವಿಜಯನಗರದ ವಿರೂಪಾಕ್ಷ ದೇಗುಲ ಮಾದರಿಯ ದೀಪಾಲಂಕಾರದ ಫೋಟೋ ಲಭ್ಯವಾಗಿದೆ. ಅದೇ ರೀತಿ ಈ ಬಾರಿಯೂ ದೀಪಾಲಂಕಾರ ಮಾಡಲಾಗಿದೆ. ರಾಜ್ಯದ ಜನತೆ ಅದರಲ್ಲೂ ಕಿತ್ತೂರು ಕರ್ನಾಟಕ ಭಾಗದ ಜನ ಈ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳಬೇಕು" ಎಂದು ಮನವಿ ಮಾಡುತ್ತೇನೆ" ಎಂದರು.

"ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರನ್ನು ಸೇವಾದಳದ ಕಾರ್ಯಕರ್ತರು ಪಾದಯಾತ್ರೆ ಮೂಲಕ ಸಭೆಯ ಜಾಗಕ್ಕೆ ಗೌರವಯುತ ಪಥಸಂಚಲನದ ಮೂಲಕ ಕರೆದೊಯ್ಯಲಿದ್ದಾರೆ. ನಂತರ ಸಭೆಯಲ್ಲಿ ನಮ್ಮ ನಾಯಕರು ವಿವಿಧ ವಿಚಾರಗಳ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡಲಿದ್ದಾರೆ" ಎಂದು ಹೇಳಿದರು.

"ಸರ್ಕಾರ ಹಾಗೂ ಪಕ್ಷದ ವತಿಯಿಂದ ರಾಜ್ಯಾದ್ಯಂತ ಈ ಶತಮಾನೋತ್ಸವ ನಿಮಿತ್ತ ಗಾಂಧಿ ಭಾರತ ಕಾರ್ಯಕ್ರಮ ಆಚರಿಸಲಾಗುವುದು. ಶಾಲಾ-ಕಾಲೇಜುಗಳಲ್ಲಿ ಚರ್ಚಾಸ್ಪರ್ಧೆ ನಡೆಸಲಾಗುವುದು. ಗಾಂಧಿ ತತ್ವ, ಆಚಾರ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗುವುದು. ಪಕ್ಷ ಹಾಗೂ ಸರ್ಕಾರದ ವತಿಯಿಂದ ಈಗಾಗಲೇ ಗಾಂಧಿ ಜಯಂತಿ ಅಂಗವಾಗಿ ಕಳೆದ ಅಕ್ಟೋಬರ್ 2ರಂದು ಗಾಂಧಿ ನಡಿಗೆ ಪಾದಯಾತ್ರೆ ಮಾಡಿದ್ದೇವೆ, ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಮಾಡಲಾಗಿದೆ" ಎಂದು ತಿಳಿಸಿದರು.

ಸಚಿವರಾದ ಜಮೀರ್ ಅಹ್ಮದ್, ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಮಾಗಡಿ ಬಾಲಕೃಷ್ಣ, ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಸೇರಿ ಮತ್ತಿತರರು ಇದ್ದರು.

ಇದನ್ನೂ ಓದಿ:ಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ: ವರ್ಷವಿಡೀ ಶತಮಾನೋತ್ಸವ ಕಾರ್ಯಕ್ರಮ, ಸಚಿವ ಪಾಟೀಲ್

ABOUT THE AUTHOR

...view details