ಬೆಂಗಳೂರು: ಲೋಕಸಭೆ ಚುನಾವಣೆ ಹಾಗೂ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ನಿವಾಸದಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ಆರಂಭವಾಗಿದೆ. ಜೆಪಿ ನಗರದ ಹೆಚ್ಡಿಕೆ ನಿವಾಸದಲ್ಲಿ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ. ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಕೋರ್ ಕಮಿಟಿ ಸದಸ್ಯರು ಭಾಗವಹಿಸಿದ್ದಾರೆ. ಲೋಕಸಭೆ ಚುನಾವಣೆ ಹಾಗೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.
ಬಿಜೆಪಿ ಜತೆ ಹೊಂದಾಣಿಕೆ ವಿಷಯ, ಪರಸ್ಪರ ಸಹಕಾರ, ಸಮನ್ವಯತೆ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಮಂಡ್ಯ ಲೋಕಸಭೆ ಕ್ಷೇತ್ರದಿಂದ ಹೆಚ್.ಡಿ. ಕುಮಾರಸ್ವಾಮಿ ಅವರ ಸ್ಪರ್ಧೆಗೆ ಒತ್ತಾಯ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಕೋರ್ ಕಮಿಟಿ ಸಭೆ ಇದೆ ಎಂದು ಹೇಳಿದರು.