ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ವಕೀಲ ದೇವರಾಜೇಗೌಡರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಡೆಸಿರುವ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಡಿಸಿಎಂ ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.
'ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಹೌದಲ್ಲವೇ ಕಾಂಗ್ರೆಸ್ಸಿಗರೇ?, ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. CD ಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್?' ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.