ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ನಂತರ ಮೊದಲ ಬಾರಿಗೆ ಶುಕ್ರವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರನ್ನು ಸ್ವಾಗತಿಸಲು ಜೆಡಿಎಸ್ ಅದ್ಧೂರಿ ಸಿದ್ಧತೆ ಮಾಡಿಕೊಂಡಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾಧ್ಯಮಗೋಷ್ಟಿಯಲ್ಲಿ ಈ ಬಗ್ಗೆ ವಿವರ ನೀಡಿದರು.
ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಬೆಳಗ್ಗೆ 11.30ಕ್ಕೆ ಕುಮಾರಸ್ವಾಮಿ ಅವರು ಆಗಮಿಸಲಿದ್ದಾರೆ. ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಶುಕ್ರವಾರ ಮಧ್ಯಾಹ್ನ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಿಂದ ಜೆಡಿಎಸ್ ಕಚೇರಿಯವರೆಗೂ ಅವರನ್ನು ಮೆರವಣಿಗೆಯಲ್ಲಿ ಕರೆತರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಕೆಲವೊಂದು ಅನುಮತಿ ಬೇಕಿರುವ ಕಾರಣ ಸಂಜೆ ವೇಳೆಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಜಯ ಗಳಿಸಿರುವುದು ಹಾಗೂ ಮೊದಲ ಬಾರಿ ಕೇಂದ್ರ ಸಚಿವರಾಗಿರುವುದಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಪಕ್ಷದ ವತಿಯಿಂದ ಅಭಿನಂದಿಸಲಾಗುತ್ತದೆ. ಮಾಜಿ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಅವರನ್ನು ಅಭಿನಂದಿಸಲಿದ್ದಾರೆ. ನಂತರ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ತೆರಳಿ ತಂದೆ ಹೆಚ್.ಡಿ. ದೇವೇಗೌಡರು ಹಾಗೂ ತಾಯಿಯ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ಜೆಪಿ ನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದು ತಿರುಪತಿಗೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಶನಿವಾರ ರಾಮನಗರದಲ್ಲಿ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಭಾನುವಾರ ತಮ್ಮನ್ನು ಲೋಕಸಭೆಗೆ ಚುನಾಯಿಸಿದ ಮಂಡ್ಯ ಜಿಲ್ಲೆಯ ಜನರಿಗೆ ಧನ್ಯವಾದ ಅರ್ಪಿಸಲು ಮಂಡ್ಯಕ್ಕೆ ತೆರಳುವ ಕಾರ್ಯಕ್ರಮವಿದೆ ಎಂದು ತಿಳಿಸಿದರು.
ಹಾಸನದಲ್ಲಿ ಫಲಿತಾಶ ನಿರೀಕ್ಷಿಸಿರಲಿಲ್ಲ:ಹಾಸನ ಮಟ್ಟಕ್ಕೆ ಮಾತನಾಡುವುದಾದರೆ, ಅನಿರೀಕ್ಷಿತ ಬೆಳವಣಿಗೆ. ಈ ರೀತಿಯ ಫಲಿತಾಂಶ ಬರುತ್ತದೆ ಎಂಬ ನಿರೀಕ್ಷೆ ಮಾಡಿರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸಾಮಾನ್ಯ. ಅಲ್ಲಿ ಸೋತಿದ್ದೇವೆ ಎಂದು ಸುಮ್ಮನೆ ಕೂರಲ್ಲ. ಹಾಸನದಲ್ಲಿ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಪಕ್ಷದ ಮುಂದಿನ ಸಂಘಟನೆಗೆ ಒತ್ತು ನೀಡುತ್ತೇವೆ. ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾತನಾಡುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಬೇರೆಯವರಿಗೆ ಮಾದರಿಯಾಗಿರಬೇಕು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ, ಸಾರ್ವಜನಿಕ ಬದುಕಿನಲ್ಲಿರುವಾಗ ನಮ್ಮ ನಡೆಯನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಮ್ಮ ವೈಯಕ್ತಿಕ ಜೀವನ ತೆರೆದ ಪುಸ್ತಕ ಆಗಿರಬೇಕು. ಬೇರೆಯವರಿಗೆ ಮಾದರಿ ಆಗಿರಬೇಕು. ಅದು ಚಿತ್ರ ನಟರೇ ಆಗಲಿ, ರಾಜಕಾರಣಿಗಳೇ ಆಗಲಿ. ಸದ್ಯ ಕೊಲೆ ಸಂಬಂಧ ತನಿಖೆ ನಡೆಯುತ್ತಿದೆ. ವರದಿ ಬಂದ ಮೇಲೆ ಮಾತನಾಡುತ್ತೇನೆ. ನಟರಾದವರು ಸಾರ್ವಜನಿಕರಿಗೆ ಆದರ್ಶ ಆಗಿರಬೇಕು ಎಂದರು.