ಬೆಂಗಳೂರು:ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ರಾಜ್ಯಕ್ಕೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು, ಮುಖಂಡರು ಬೃಹತ್ ಸಂಖ್ಯೆಯಲ್ಲಿ ಸೇರಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಬಳಿಕ ಸಾದರಹಳ್ಳಿ ಗೇಟ್ ಬಳಿ ಜೆಡಿಎಸ್ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿದರು.
ನಂತರ ಮಾತನಾಡುತ್ತಾ, ಲೋಕಸಭೆ ಫಲಿತಾಂಶ ಬಂದ ಮೇಲೆ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಮೋದಿ ಅವರ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದೆ ಎಂದರು.
ಕೇಂದ್ರ ಮಂತ್ರಿಯಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷವಾಗಿ ರಾಮನಗರ, ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಕೃಷಿ ಸಚಿವನಾಗಿ ಕೆಲಸ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದೆ ಎಂದು ಹೇಳಿದರು.
ಜೆಡಿಎಸ್ ಪಕ್ಷವನ್ನು ಮುಗಿಸಿದ್ದೇವೆಂದು ದುರಹಂಕಾರದಲ್ಲಿ ಮಾತನಾಡಿರುವವರಿಗೆ ಉತ್ತರ ಕೊಡುವುದಿಲ್ಲ. ನನಗೆ ಬೇಕಾಗಿರೋದು ರಾಜಕೀಯ ಅಲ್ಲ. ರಾಜ್ಯದ ಜನರ ಸಮಸ್ಯೆಗೆ ಪರಿಹಾರ. ನರೇಂದ್ರ ಮೋದಿ ಅವರು ನನಗೆ ಎರಡು ದೊಡ್ಡ ಖಾತೆ ಕೊಟ್ಟಿದ್ದಾರೆ. ನಾಡಿನ ಯುವಕರಿಗೆ ಉದ್ಯೋಗ ಸೃಷ್ಟಿಸುವ ಕೆಲಸ ಮಾಡುತ್ತೇನೆ. ಬೇರೆ ಬೇರೆ ಕಡೆ ಕೆಲಸ ಕೊಡುವ ಅವಕಾಶ ಇದೆ. ನಾನು ಸಮಯ ವ್ಯರ್ಥ ಮಾಡುವುದಿಲ್ಲ. ಎಲ್ಲಾ ಇಲಾಖೆಯಲ್ಲಿ ನಮ್ಮ ರಾಜ್ಯದ ಸಮಸ್ಯೆಗೆ ಪರಿಹಾರ ತರುವ ಕೆಲಸ ಮಾಡುತ್ತೇನೆ. ರೈತರ ಕೃಷಿಗೆ ತೊಂದರೆ ಕೊಡದಂತೆ ಕಾರ್ಖಾನೆ ಮಾಡುವ ಕೆಲಸ ಮಾಡುತ್ತೇನೆ ಎಂದರು.