ಶಿವಮೊಗ್ಗ:ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ನಗರದ ಅಲ್ಲಮ ಪ್ರಭು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ (ಸೋಮವಾರ) ನಾಲ್ಕು ಲೋಕಸಭಾ ಕ್ಷೇತ್ರಗಳ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು-ಉಡುಪಿ ಕ್ಷೇತ್ರಗಳ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವಿ ಮಾಡಿದರು.
ಈಶ್ವರಪ್ಪ, ದಾವಣಗೆರೆ ನಾಯಕರು ಗೈರು:ಬಿಜೆಪಿ ಹಿರಿಯ ನಾಯಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಈಗಾಗಲೇ ಯಡಿಯೂರಪ್ಪ ಕುಟುಂಬದ ಮೇಲೆ ಮುನಿಸಿಕೊಂಡಿದ್ದಾರೆ. ತಮ್ಮ ಪುತ್ರ ಕಾಂತೇಶ್ಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಲು ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರಣರು ಎಂದು ಅವರಿಬ್ಬರ ವಿರುದ್ದ ಗರಂ ಆಗಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿಯೂ ಅವರು ಹೇಳಿದ್ದಾರೆ. ಇದಕ್ಕಾಗಿ ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.
ಅಭ್ಯರ್ಥಿ ಬದಲಿಸುವಂತೆ ದಾವಣಗೆರೆ ಬಿಜೆಪಿ ರೆಬೆಲ್:ದಾವಣಗೆರೆ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ವಿರುದ್ದ ದಾವಣಗೆರೆ ಜಿಲ್ಲೆ ಬಿಜೆಪಿಯೇ ರೆಬಲ್ ಆಗಿದೆ. ಸಿದ್ದೇಶ್ಬರ್ ಕಳೆದ ಅವಧಿಯಲ್ಲಿ ಇದು ನನ್ನ ಕೊನೆಯ ಚುನಾವಣೆ ಎಂದು ಘೋಷಣೆ ಮಾಡಿದ್ದರು. ಇದರಿಂದ ಹೊಸಬರಿಗೆ ಅವಕಾಶ ಸಿಗಬಹುದೆಂಬ ನಿರೀಕ್ಷೆ ಇತ್ತು. ಆದರೆ, ಸಿದ್ದೇಶ್ವರ್ ತಮ್ಮ ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯವಾಗಿ ಯಾವುದೇ ಮಾಜಿ ಶಾಸಕರನ್ನೂ ಸಂಪರ್ಕಿಸದೆ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ ಎಂದು ಜಿಲ್ಲಾ ಬಿಜೆಪಿ ನಾಯಕರು ಕೋಪಗೊಂಡಿದ್ದಾರೆ.