ಬೆಂಗಳೂರು: ಭ್ರಮರಾಂಭ ಸಮೇತ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಮತ್ತು ಕಾಡುಮಲ್ಲೇಶ್ವರ ಗೆಳೆಯರ ಬಳಗದ ವತಿಯಿಂದ ನವೆಂಬರ್ 15ರಿಂದ 18ರವರೆಗೆ 8ನೇ ರೈತಸ್ನೇಹಿ ಮಲ್ಲೇಶ್ವರ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಲಾಗಿದೆ.
ಮಲ್ಲೇಶ್ವರ ಕಡಲೆಕಾಯಿ ಪರಿಷೆ ಕುರಿತು ಕಾಡುಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಅವರು ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬೆಂಗಳೂರಿನ ಬಸವನಗುಡಿ ಕಡಲೆಕಾಯಿ ಪರಿಷೆಯಂತೆ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಪ್ರಸಿದ್ದಿ ಪಡೆದಿದೆ. ಕಳೆದ 8 ವರ್ಷಗಳಿಂದ ಪರಿಷೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ನಾಲ್ಕು ದಿನಗಳ ಕಡಲೆಕಾಯಿ ಪರಿಷೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣದಿಂದ ರೈತರು ಕಡಲೆಕಾಯಿ ತಂದು ಮಾರಾಟ ಮಾಡಲಿದ್ದಾರೆ. ರೈತರು, ಬೀದಿ ಬದಿಯ ವ್ಯಾಪಾರಿಗಳಿಗೆ 400ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಪರಿಸರಸ್ನೇಹಿ, ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಪ್ಲಾಸ್ಟಿಕ್‌ಮುಕ್ತ, ಕೈ ಬಟ್ಟೆ ಚೀಲ, ಪೇಪರ್ ಕವರ್‌ಗಳನ್ನು ಬಳಸಿ ಎಂದು ಸಾರ್ವಜನಿಕರಿಗೆ ಉಚಿತವಾಗಿ ನೀಡಲಾಗುತ್ತಿದೆ. ಶುಕ್ರವಾರ ಸಂಜೆ 4-30ಕ್ಕೆ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಪರಿಷೆ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರುಗಳಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಮುನಿರತ್ನ ಭಾಗವಹಿಸಲಿದ್ದಾರೆ ಎಂದು ಹೇಳಿದರು.