ಚಿಕ್ಕೋಡಿ:ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸ್ಥಳಕ್ಕೆ ಬೆಳಗಾವಿ ಎಎಸ್ಪಿ ಶೃತಿ ಹಾಗೂ ಕಾಗವಾಡ ತಹಶೀಲ್ದಾರ್ ಸಂಜಯ್ ಇಂಗಳಿ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
1993ರಲ್ಲಿ ನಮ್ಮ ಕುಟುಂಬವೊಂದಕ್ಕೆ ಸರ್ಕಾರದಿಂದ ಮೂರು ಎಕರೆ ಜಮೀನು ಮತ್ತು ಹೊಲಕ್ಕೆ ರಸ್ತೆ ಮಂಜೂರು ಮಾಡಲಾಗಿತ್ತು. ಆದರೆ, ''ನಮ್ಮ ಜಮೀನಿಗೆ ಹೊಂದಿಕೊಂಡಿರುವ ಪಕ್ಕದವರು ನಮ್ಮ 20 ಗುಂಟೆ ಅತಿಕ್ರಮಣ ಮಾಡಿಕೊಂಡು ತೊಂದರೆ ಕೊಡುತ್ತಿದ್ದಾರೆ. ಮಹಿಳೆ ಹಾಗೂ ಆಕೆಯ ಮಗನ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಇದೇ ವೇಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ'' ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಈ ಹಿಂದೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆನ್ನಲಾದ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು.
ಸ್ಥಳಕ್ಕೆ ಬೆಳಗಾವಿ ಪೊಲೀಸ್ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ. ತಹಶೀಲ್ದಾರ್ ಅವರು ಜಮೀನಿನ ಸರ್ವೆ ಕಾರ್ಯ ನಡೆಸಿ, ಒತ್ತುವರಿ ತೆರವು ಮಾಡಿದ್ದಾರೆ. ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಆರೋಪ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.