ಮಂಗಳೂರು:ಬೆಂಗಳೂರಿನಲ್ಲಿ ಅ.26ರಂದು ಕಂಬಳ ನಡೆಯಲಿದ್ದು, ಆ ಮೂಲಕ ಈ ಬಾರಿಯ ಕಂಬಳ ಋತು ಆರಂಭವಾಗಲಿದೆ. ಇದೇ ಮೊದಲ ಬಾರಿ ಶಿವಮೊಗ್ಗದಲ್ಲೂ ಕಂಬಳ ಆಯೋಜಿಸಲು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ತೀರ್ಮಾನಿಸಿದೆ ಎಂದು ದ.ಕ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಶನಿವಾರ ಮೂಡುಬಿದಿರೆಯಲ್ಲಿ ನಡೆದ ಕಂಬಳ ಸಮಿತಿ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮೊದಲ ಕಂಬಳ ಅಕ್ಟೋಬರ್ 26ರಂದು ನಡೆಯಲಿದೆ. ಕೊನೆಯ ಕಂಬಳವನ್ನು 2025ರ ಏಪ್ರಿಲ್ 19ರಂದು ಶಿವಮೊಗ್ಗದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ವರ್ಷ ಒಟ್ಟು 26 ಕಂಬಳಗಳನ್ನು ನಡೆಸಲು ನಿರ್ಧರಿಸಲಾಗಿದೆ. ಮಂಗಳೂರಿನ ಪಿಲಿಕುಳ ಕಂಬಳಕ್ಕೆ ಮತ್ತೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು.
ಕಂಬಳಗಳು ಈಚೆಗೆ ಶಿಸ್ತುಬದ್ಧವಾಗಿ ನಡೆಯುತ್ತಿದ್ದು, ಕರಾವಳಿಯ ಈ ಕ್ರೀಡೆಯನ್ನು ಹೆಚ್ಚು ಆಕರ್ಷಕವಾಗಿಸಲು ನಿಯಮಗಳನ್ನು ಬಿಗಿ ಮಾಡಲಾಗಿದೆ. ಆಯಾ ಕಂಬಳ ಸಮಿತಿಗಳು ಕಡ್ಡಾಯವಾಗಿ ಪಾಲಿಸಬೇಕಾಗಿರುವ ನಿಯಮಾವಳಿಗಳನ್ನು ಶೀಘ್ರದಲ್ಲೇ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.