ಕರ್ನಾಟಕ

karnataka

ETV Bharat / state

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ - Kempanna Passes away

ಅನಾರೋಗ್ಯದಿಂದ ಬಳಲುತ್ತಿದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಇಂದು ನಿಧನರಾಗಿದ್ದಾರೆ. ಇವರು ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಸುದ್ದಿಯಾಗಿದ್ದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ (ETV Bharat)

By ETV Bharat Karnataka Team

Published : Sep 19, 2024, 1:48 PM IST

ಬೆಂಗಳೂರು:ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಅವರು ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇವರಿಗೆ 84 ವರ್ಷ ವಯಸ್ಸಾಗಿತ್ತು.

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸಂಚಲನ ಮೂಡಿಸಿದ್ದರು.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. 'ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸಂತಾಪ ಸೂಚಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ: 'ಕೆಂಪಣ್ಣ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ನೋವುಂಟುಮಾಡಿದೆ. ಸದಾ ಕ್ರಿಯಾಶೀಲರಾಗಿ ಇರುತ್ತಿದ್ದ ಅವರ ಸಾವು ಗುತ್ತಿಗೆದಾರರ ಹೋರಾಟ ಮತ್ತು ದನಿಗೆ ತುಂಬಲಾರದ ನಷ್ಟ' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ದುಃಖ ವ್ಯಕ್ತಪಡಿಸಿದ್ದಾರೆ.

'ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿರುದ್ಧ ದನಿ ಎತ್ತಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ ಕಾರಣಕ್ಕೆ ಇಳಿ ವಯಸ್ಸಿನಲ್ಲೂ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿದ್ದರು. ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲವಾಗಿದ್ದ ಕೆಂಪಣ್ಣ ಅವರು ನನ್ನ ಬಳಿ ಗುತ್ತಿಗೆದಾರರ ಸಮಸ್ಯೆಗಳನ್ನು ಇಟ್ಟುಕೊಂಡು ಅನೇಕ ಬಾರಿ ಚರ್ಚೆ ನಡೆಸಿದ್ದರು' ಎಂದು ಹೇಳಿದ್ದಾರೆ.

'ಈ ಹಿರಿಯ ಜೀವದ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ, ಬಂಧು, ಬಳಗದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಮೇಶ್ ರೇಶಮಿಯಾ ತಂದೆ, ಹಿರಿಯ ಸಂಗೀತ ನಿರ್ದೇಶಕ ವಿಪಿನ್ ರೇಶಮಿಯಾ ನಿಧನ - Vipin Reshammiya Passes Away

ABOUT THE AUTHOR

...view details