ಬೆಂಗಳೂರು:ಇದುವರೆಗೂ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿದ್ದ ಜನತಾ ದರ್ಶನವನ್ನು ವಿಧಾನಸೌಧದ ಮುಂಭಾಗದಲ್ಲಿ ಫೆಬ್ರವರಿ 8ರಂದು ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿಗಳಾಗಿದ್ದಾಗ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿ ಇಲ್ಲವೇ, ಜಿಲ್ಲಾ ಪಂಚಾಯಿತಿ ಕಚೇರಿಯ ಬಳಿ ನಡೆಸಲಾಗುತ್ತಿತ್ತು. ಅದೇ ರೀತಿ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆಸಲಾಗುತ್ತಿತ್ತು. ಆದರೆ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕುಗೊಳಿಸಲು ಜನತಾ ದರ್ಶನವನ್ನು ವಿಧಾನಸೌಧದ ಮುಂಭಾಗದಲ್ಲಿ ನಡೆಸಲು ನಿರ್ಧರಿಸಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಅವರು ಜನವರಿ 31ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉಸ್ತುವಾರಿ ಕಾರ್ಯದರ್ಶಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಗೆ ಬರುವ ಮುನ್ನ ಪ್ರಶ್ನೆಗಳಿಗೆ ಉತ್ತರ ತಯಾರಿಸಿಕೊಂಡು ಬರಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಉಸ್ತುವಾರಿ ಕಾರ್ಯದರ್ಶಿಗಳಾದ ನಂತರ ನಿಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿ ಎಷ್ಟು ಪ್ರವಾಸ ಮಾಡಿದ್ದೀರಿ? ಪ್ರವಾಸ ಮಾಡಿದಾಗ ನೀವು ಭೇಟಿ ಕೊಟ್ಟ ಹತ್ತು ಸಂಘ-ಸಂಸ್ಥೆಗಳು ಯಾವುವು? ಭೇಟಿ ಮಾಡಿದ ಸಂದರ್ಭದಲ್ಲಿ ಯಾವ ಸಮಸ್ಯೆಗಳಿಗೆ ಉತ್ತರ ಕಂಡು ಹಿಡಿದಿದ್ದೀರಿ?. ಇದೇ ರೀತಿ ಇಡೀ ದೇಶದ ಗಮನ ಸೆಳೆದಿರುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ಜಾರಿಯಾಗುತ್ತಿವೆ? ಎಂಬುದೂ ಸೇರಿದಂತೆ ಕೆಲವು ಪ್ರಶ್ನೆಗಳನ್ನು ಮುಂಚಿತವಾಗಿಯೇ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಇದರ ಜೊತೆಗೆ ರಾಜ್ಯದಲ್ಲಿ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ನಿಮ್ಮ ಜಿಲ್ಲೆಗಳ ಪರಿಸ್ಥಿತಿ ಏನು?. ಬರಗಾಲದಿಂದ ಜಿಲ್ಲೆಯ ಯಾವ ಭಾಗಗಳು ಹೆಚ್ಚು ಕಷ್ಟಕ್ಕೊಳಗಾಗಲಿವೆ? ಎಂಬ ಕುರಿತೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಉತ್ತರ ಬಯಸಲಾಗಿದೆ.
ಸರ್ಕಾರದ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಜತೆ ಸಬೆ ನಡೆಸುವುದು ಸಹಜ ಸಂಪ್ರದಾಯವಾದರೂ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆಯುವುದು ಅಪರೂಪ. ಆದರೆ ಜನತಾ ದರ್ಶನ ಕಾರ್ಯಕ್ರಮವನ್ನು ಇದೇ ಮೊದಲ ಬಾರಿ ವಿಧಾನಸೌಧದ ಮುಂಬಾಗದ ಮೆಟ್ಟಿಲುಗಳ ಮೇಲೆ ನಡೆಸಲಿರುವ ಮುಖ್ಯಮಂತ್ರಿಗಳು, ಇದಕ್ಕೆ ಶಕ್ತಿ ನೀಡಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಜತೆಗಿನ ಸಭೆಯಲ್ಲಿ ತಳಮಟ್ಟದ ವಸ್ತುಸ್ಥಿತಿಯ ಬಗ್ಗೆ ವಿವರ ಪಡೆಯಲಿದ್ದಾರೆ. ಜನತಾ ದರ್ಶನ ಕಾರ್ಯಕ್ರಮಕ್ಕೂ ಮುನ್ನ ಇಂತಹ ವಿವರಗಳನ್ನು ಪಡೆದರೆ ಫೆಬ್ರವರಿ 8ರಂದು ನಡೆಯಲಿರುವ ಜನತಾದರ್ಶನ ಕಾರ್ಯಕ್ರಮದಲ್ಲಿ ನಾಡಿನ ಜನ ತರುವ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಒದಗಿಸಲು ಅನುಕೂಲವಾಗಲಿದೆ ಎಂಬುದು ಸಿಎಂ ಯೋಚನೆಯಾಗಿದೆ.
ಇದನ್ನೂ ಓದು:ನಾನು ನಾಸ್ತಿಕನಲ್ಲ, ಆಸ್ತಿಕ; ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ: ಸಿಎಂ ಸಿದ್ದರಾಮಯ್ಯ