ಬೆಂಗಳೂರು:ಕೇಂದ್ರ ಬಜೆಟ್ ಪೂರ್ವ ಸಿದ್ಧತೆ ಆರಂಭವಾಗಿದೆ. ರಾಜ್ಯ ಸರ್ಕಾರ ಕರ್ನಾಟಕದ ವಿಷ್ ಲಿಸ್ಟ್ ಅನ್ನು ಕೇಂದ್ರದ ಮುಂದಿಟ್ಟಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಬೇಡಿಕೆಗಳನ್ನು ಕೇಂದ್ರ ಬಜೆಟ್ ಪೂರ್ವಭಾವಿ ಸಭೆಗೆ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಪೂರ್ವ - ಬಜೆಟ್ ಸಂಬಂಧಿಸಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆ ಶುಕ್ರವಾರ ರಾಜಸ್ಥಾನದ ಜೈಸಲ್ಮೇರ್ನಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಮತ್ತು ಮುಖ್ಯಮಂತ್ರಿಗಳ ಪರವಾಗಿ ಸಚಿವ ಕೃಷ್ಣ ಬೈರೇಗೌಡ ಸಭೆಯಲ್ಲಿ ಪಾಲ್ಗೊಂಡು ಕೆಲ ಸಲಹೆ, ಬೇಡಿಕೆಗಳನ್ನು ಕೇಂದ್ರದ ಮುಂದಿಟ್ಟಿದ್ದಾರೆ.
ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಮತ್ತು ಜಾಗತಿಕ ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟಗಳ ಅಭಿವೃದ್ಧಿಗೆ ವಿಶೇಷ ಹೊಂದಾಣಿಕೆಯ ಅನುದಾನ ನೀಡುವಂತೆ ಕೋರಿದರು. ಬರಪೀಡಿತ ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಈ ಹಿಂದೆಯೇ ಘೋಷಿಸಿದ್ದ ₹5,300 ಕೋಟಿ ಬಿಡುಗಡೆಗೂಳಿಸಿ ಎಂದು ಒತ್ತಾಯಿಸಿದರು.