ಬೆಂಗಳೂರು: ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಇಂದು ಸಂಜೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಸೆಪ್ಟೆಂಬರ್ 15ರಂದು ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಬೀದರ್ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಲಿದ್ದಾರೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಸೆಪ್ಟೆಂಬರ್ 15ರಂದು ಬೆಳಗ್ಗೆ 8.30ಕ್ಕೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಸುಮಾರು 40 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವಿನ ಜಾಗೃತಿ ಅತ್ಯಂತ ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ ಎಂದರು.