ಬೆಂಗಳೂರು: ಶಿಕ್ಷಣದಲ್ಲಿ ಹಿಂದುಳಿದಿರುವ ಮತ್ತು ಕಡಿಮೆ ಫಲಿತಾಂಶ ಬಂದಿರುವ ರಾಜ್ಯದ ಏಳು ಜಿಲ್ಲೆಗಳಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸಂಬಂಧ ಹೊರಡಿಸಿದ್ದ ಅಧಿಸೂಚನೆ ಹಿಂಪಡೆದಿರುವುದಾಗಿ ಇಂದು ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.
ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ಕಲಬುರಗಿ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ್ದ ಆಧಿಸೂಚನೆ ಪ್ರಶ್ನಿಸಿ ಅನುದಾನರಹಿತ ನೋಂದಾಯಿತ ಶಾಲೆಗಳ ಒಕ್ಕೂಟ ಸುಪ್ರೀಂ ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಮಾಹಿತಿ ನೀಡಿದರು.
ವಿಚಾರಣೆ ವೇಳೆ ಮೆಹ್ತಾ, ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಕ್ಕೂ ಮುನ್ನ ರಾಜ್ಯ ಸರ್ಕಾರ ಅಧಿಸೂಚನೆಯನ್ನು ಹಿಂಪಡೆದುಕೊಂಡಿದೆ ಎಂಬುದಾಗಿ ತಿಳಿಸಿದರು. ಅಲ್ಲದೆ, ಪರೀಕ್ಷೆಯ ಫಲಿತಾಂಶವನ್ನೂ ಪ್ರಕಟಿಸಿಲ್ಲ ಎಂದರು.
ಇದಕ್ಕೆ ಅರ್ಜಿದಾರ ಪರ ವಕೀಲರಾದ ಕೆ.ವಿ.ಧನಂಜಯ್ ಅವರು ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದ ಹೊರತಾಗಿಯೂ ಕರ್ನಾಟಕ ಸರ್ಕಾರ ಬೋರ್ಡ್ ಪರೀಕ್ಷೆಗಳನ್ನು ನಡೆಸಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜನರಿಗೆ ಕಿರುಕುಳ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು. ಇದಕ್ಕೆ ಮೆಹ್ತಾ, ಮಕ್ಕಳಿಗೆ ತೊಂದರೆ ನೀಡಲು ಯಾರೂ ಆಸಕ್ತಿ ತೋರುವುದಿಲ್ಲ. ಕೆಲವು ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಪಡೆದ ಸರಾಸರಿ ಅಂಕಗಳು 50ಕ್ಕಿಂತ ಕಡಿಮೆ ಇರುವುದರಿಂದ ಪರೀಕ್ಷೆ ನಡೆಸಲಾಗಿತ್ತು ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಸಂಕ್ಷಿಪ್ತ ಮೌಲ್ಯಮಾಪನಕ್ಕಾಗಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಶಾಲೆಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಬೋರ್ಡ್ ಪರೀಕ್ಷೆ ನಡೆಸಲು ಹಸಿರು ನಿಶಾನೆ ತೋರಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ಮಾರ್ಚ್ 12ರಂದು ರದ್ದುಪಡಿಸಿ ಆದೇಶಿಸಿತ್ತು.
ಇದೀಗ ಅತೀ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳಲ್ಲಿ ಮತ್ತೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತು. ಈ ಸಂಬಂಧ ನೋಂದಾಯಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಅರ್ಜಿ ಸಲ್ಲಿಸಿತ್ತು.
ಇದನ್ನೂ ಓದಿ: ಕ್ಲಾಸ್ 10- 12 ಬೋರ್ಡ್ ಪರೀಕ್ಷೆಗೆ ಶೇ 75ರಷ್ಟು ಹಾಜರಾತಿ ಕಡ್ಡಾಯ: ಸಿಬಿಎಸ್ಸಿ