ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ಗೆ ಫಿಸಿಯೋಥೆರಪಿ ಹಾಗೂ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದು ಹೈಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ವಿವರಿಸಲಾಗಿದೆ.
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ನಡೆಸಿತು.ವಿಚಾರಣೆ ವೇಳೆ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ಯ ವೈದ್ಯಕೀಯ ವರದಿಯನ್ನು ಬಳ್ಳಾರಿ ಜೈಲು ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ವಿಚಾರಣೆ ಆರಂಭವಾಗುತ್ತಿದ್ದಂತೆ ನ್ಯಾಯಪೀಠವು ಮುಚ್ಚಿದ ಲಕೋಟೆಯಲ್ಲಿದ್ದ ವರದಿಯನ್ನು ಪರಿಶೀಲಿಸಿತು.
ಸರ್ಕಾರದ ಪರ ವಾದ ಮಂಡಿಸಿದ ವಿಶೇಷ ಅಭಿಯೋಜಕ ಪಿ.ಪ್ರಸನ್ನ ಕುಮಾರ್, "ದರ್ಶನ್ ಅವರ ವೈದ್ಯಕೀಯ ವರದಿಯ ಪ್ರತಿಯನ್ನು ನಮಗೆ ನೀಡಬೇಕು. ಅದನ್ನು ಪರಿಶೀಲಿಸಿ, ಅಗತ್ಯಬಿದ್ದರೆ ಆಕ್ಷೇಪಣೆ ಸಲ್ಲಿಸಲಾಗುವುದು. ಆನಂತರ ವಾದ ಮಂಡಿಸಲಾಗುವುದು" ಎಂದರು.