ಬೆಂಗಳೂರು:ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯ ಕ್ರಮ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಸಂಪಂಗಿ ರಾಮನಗರದ ನಿವಾಸಿ ಬಿ ಲಕ್ಷ್ಮಿದೇವಿ ಎಂಬುವರು ಸಲ್ಲಿಸಿದ್ದ ಅರ್ಜಿಯ ಸಂಬಂಧ ಸುದೀರ್ಘ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ಇಂದು ಪ್ರಕಟಿಸಿತು. ಈ ಕುರಿತಂತೆ ಆದೇಶದ ವಿಸ್ತೃತ ಪ್ರತಿ ಲಭ್ಯವಾಗಬೇಕಿದೆ.
ಏನಿದು ಪ್ರಕರಣ: ಪ್ರಜಾ ಪ್ರತಿನಿಧಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ರಿಜ್ವಾನ್ ಅರ್ಷದ್ ಅವರು ಅಕ್ರಮ ಎಸಗಿದ್ದು, ಕಾಯ್ದೆಯಡಿ ಆಯ್ಕೆಯಾಗಲು ಅವರು ಅರ್ಹರಲ್ಲ. ಅವರನ್ನು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ತಡೆಯಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಕಾಂಗ್ರೆಸ್ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳು ಆಮಿಷ ಹಾಗೂ ಆಶ್ವಾಸನೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿವೆ. ಆ ಮೂಲಕ ರಿಜ್ವಾನ್ ಅರ್ಷದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.