ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಜಾತಿ ಗಣತಿ ಕುರಿತ ಅರ್ಜಿಗಳ ಸುಧೀರ್ಘ ವಿಚಾರಣೆ ನಡೆಸಬೇಕಾದ ಅಗತ್ಯವಿದ್ದು, ಅಲ್ಲಿಯವರೆಗೂ ಯಾವುದೇ ರೀತಿಯ ಆದೇಶ ನೀಡಲಾಗದು ಎಂದು ಹೈಕೋರ್ಟ್ ತಿಳಿಸಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ 2014ರ ಜನವರಿ 23ರಂದು ಸರ್ಕಾರ ಆದೇಶಿಸಿರುವುದನ್ನು ವಜಾ ಮಾಡುವಂತೆ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ ಸೆಕ್ಷನ್ 9ಕ್ಕೆ ತಂದಿರುವ ತಿದ್ದುಪಡಿ ವಜಾ ಮಾಡುವಂತೆ ಕೋರಿ ಬೀದರ್ನ ಶಿವರಾಜ್ ಕಣಶೆಟ್ಟಿ ಮತ್ತಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿಂದುಳಿದ ವರ್ಗಗಳ ಆಯೋಗದಿಂದ ವರದಿಯನ್ನು ಫೆಬ್ರವರಿ 29ಕ್ಕೆ ಸರ್ಕಾರ ಸ್ವೀಕರಿಸಿದೆ. ಈ ವರದಿ ಕುರಿತಂತೆ ಸರ್ಕಾರ ಇನ್ನೂ ನಿರ್ಧಾರಕ್ಕೆ ಬರಬೇಕಾಗಿದೆ ಎಂದು ಪ್ರಮಾಣ ಪತ್ರದ ಮೂಲಕ ತಿಳಿಸಿದರು. ಈ ವೇಳೆ ನ್ಯಾಯಪೀಠ, ಇದೇ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳ ಸಂಬಂಧ ಸರ್ಕಾರ ಪ್ರತಿಕ್ರಿಯೆ ನೀಡಬೇಕಾಗಿದೆ ಎಂದು ತಿಳಿಸಿತು. ಇದಕ್ಕೆ ಅಡ್ವೋಕೆಟ್ ಜನರಲ್, ಒಂದು ವಾರದಲ್ಲಿ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ತಿಳಿಸಿದರು.