ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ಕಡಿಮೆಯಾದ ಚಂಡಮಾರುತದ ಪ್ರಭಾವ ಅರಬ್ಬಿ ಸಮುದ್ರದಲ್ಲಿ ಚುರುಕು ಪಡೆದಿದೆ. ಇದರಿಂದಾಗಿ ಕರಾವಳಿ ಮತ್ತು ಒಳನಾಡಿನಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ಅಕ್ಟೋಬರ್ 21ರಿಂದ 22ರವರೆಗೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಉಡುಪಿ, ಉತ್ತರ ಕನ್ನಡ ಮತ್ತು ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 20ರಂದು ಒಂದೇ ದಿನ ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಗುಡುಗುಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಕರಾವಳಿ, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ:ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅರಬ್ಬಿ ಸಮುದ್ರ ಮತ್ತು ಪಕ್ಕದ ಉತ್ತರ ಲಕ್ಷದ್ವೀಪ ಪ್ರದೇಶದ ಮೇಲೆ ಚಂಡಮಾರುತದ ಪರಿಚಲನೆ ಇದ್ದು, ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀವರೆಗೆ ಎತ್ತರದಲ್ಲಿದೆ. ಮುಂದಿನ 12 ಗಂಟೆಗಳ ಅವಧಿಯಲ್ಲಿ ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದೆ. ನಂತರದ ಕರಾವಳಿಯಿಂದ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಇನ್ನು ಪೂರ್ವ-ಮಧ್ಯ ಅರಬ್ಬಿ ಸಮುದ್ರದಿಂದ ದಕ್ಷಿಣ ಆಂಧ್ರ ಪ್ರದೇಶದ ಕರಾವಳಿಯವರೆಗೆ ಹಾಗೂ ಕರ್ನಾಟಕ ಮತ್ತು ರಾಯಲಸೀಮಾದಾದ್ಯಂತ ಟ್ರಫ್ ನಿರ್ಮಾಣವಾಗಿದ್ದು, ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಮಳೆ ಹೆಚ್ಚಾಗಲಿದೆ. ಇಂದು ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಳೆಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯಲ್ಲಿ ಅತಿ ಹೆಚ್ಚು ಮಳೆ (15 ಸೆ.ಮೀ) ದಾಖಲಾಗಿದೆ. ಉಳಿದಂತೆ, ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ 9 ಸೆ.ಮೀ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 8 ಸೆ.ಮೀ ಮಳೆ ಬಿದ್ದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಹಾವೇರಿ: ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿಹೋಗಿದ್ದ 12 ವರ್ಷದ ಬಾಲಕ ಸಾವು
ಇದನ್ನೂ ಓದಿ:ದಾವಣಗೆರೆ: ಧಾರಾಕಾರ ಮಳೆ, ಮನೆಗಳಿಗೆ ನುಗ್ಗಿದ ನೀರು; ಜನರ ಪರದಾಟ