ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸುಮುದ್ರದಲ್ಲಿ ಉಂಟಾಗಿದ್ದ ಚಂಡಮಾರುತದ ಕಾರಣ ರಾಜ್ಯದೆಲ್ಲೆಡೆ ಅಬ್ಬರಿಸಿದ್ದ ವರುಣ ಇನ್ನೆರಡು ದಿನಗಳಲ್ಲಿ ಕೊಂಚ ತಣ್ಣಗಾಗುವ ಲಕ್ಷಣಗಳು ಗೋಚರಿಸುತ್ತಿವೆ. ಆದರೂ ಸದ್ಯಕ್ಕೆ ಕೆಲ ಜಿಲ್ಲೆಗಳಲ್ಲಿ ಇನ್ನೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 24 ಗಂಟೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ (ETV Bharat) ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಬಳ್ಳಾರಿ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಗದಗ, ಧಾರವಾಡ, ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಅಂದಾಜಿಸಿದೆ.
ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಪಕ್ಕದ ಉತ್ತರ ಕರಾವಳಿ ತಮಿಳುನಾಡಿನ ಮೇಲೆ ಕಡಿಮೆ ಒತ್ತಡದ ಪ್ರದೇಶವು ಮುಂದುವರಿಯಲಿದೆ ಮತ್ತು ಅದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆ ಸಮುದ್ರ ಮಟ್ಟದಿಂದ 5.8 ಕಿಮೀ ಎತ್ತರದೊಂದಿಗೆ ನೈಋತ್ಯಕ್ಕೆ ವಾಲುತ್ತಿದೆ. ಮುಂದಿನ 6 ಗಂಟೆಗಳಲ್ಲಿ ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ. ನಂತರ ಕಡಿಮೆ ಒತ್ತಡದ ಪ್ರದೇಶ ದುರ್ಬಲಗೊಳ್ಳುವ ಸಾಧ್ಯತೆಯಿದೆ. ಇನ್ನೊಂದು ಚಂಡಮಾರುತದ ಪರಿಚಲನೆಯು ಉತ್ತರ ಲಕ್ಷದ್ವೀಪ ಮತ್ತು ನೆರೆಹೊರೆಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿಮೀ ಎತ್ತರದಲ್ಲಿದೆ. ನಿನ್ನೆಯಿಂದ ಕರಾವಳಿ ಮತ್ತು ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ (9 ಸೆಮೀ) ದಾಖಲಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ದಾವಣಗೆರೆ: ಧಾರಾಕಾರ ಮಳೆ, ಮನೆಗಳಿಗೆ ನುಗ್ಗಿದ ನೀರು; ಜನರ ಪರದಾಟ