ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ಅಧಿಕವಾಗಿ ಕಾಣಿಸಿಕೊಂಡಿರುವ ಚಳಿ ಜನವರಿ 15ರ ವರೆಗೆ ಮುಂದುವರಿಯಲಿದೆ. ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಸರಾಸರಿ 3 ರಿಂದ 6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕುಸಿತವಾಗಿದೆ. ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿಯೂ 1 ರಿಂದ 2 ಡಿಗ್ರಿ ಸೆಲ್ಸಿಯಸ್ ಇಳಿಮುಖವಾಗಿದೆ. ಎಲ್ಲ ಜಿಲ್ಲೆಗಳಲ್ಲಿ ರಾತ್ರಿ ವೇಳೆ ಚಳಿ ಅಧಿಕವಾಗಿದ್ದು, ಸಂಜೆ ಮತ್ತು ಬೆಳಗ್ಗೆ ಇಬ್ಬನಿ ಬೀಳುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮತ್ತು ನಾಳೆ ಕನಿಷ್ಠ ತಾಪಮಾನ ಎಲ್ಲೆಲ್ಲಿ ?ಮುಂದಿನ 24 ಗಂಟೆಗಳಲ್ಲಿ ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ. ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿಯಲ್ಲಿ ಹೇಳಿದೆ.
ಸಿಲಿಕಾನ್ ಸಿಟಿಯಲ್ಲೂ ಗಢಗಢ :ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಮೋಡವಿಲ್ಲದ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಸಮಯದಲ್ಲಿ ದಟ್ಟ ಮಂಜು ಕವಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 15 ಡಿಗ್ರಿ ಸೆಲ್ಸಿಯಸ್ ದಾಖಾಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.