ಮೈಸೂರು: ಪ್ರವಾಸ ಬಂದಿದ್ದ ಶಾಲಾ ಮಕ್ಕಳಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ ಘಟನೆ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಚಾಲಕನ ಅಜಾಗರೂಕತೆಯಿಂದ ಡಿವೈಡರ್ಗೆ ಡಿಕ್ಕಿಯಾಗಿ ಬಸ್ ಮಗುಚಿ ಬಿದ್ದಿದೆ. ಬಸ್ನಲ್ಲಿದ್ದ 36 ಮಕ್ಕಳ ಪೈಕಿ 11 ಮಕ್ಕಳು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.
ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ (ETV Bharat) ಬೆಳಗಾವಿ ಜಿಲ್ಲೆಯ ಖಾನಾಪುರದ ಶಾಂತಿನಿಕೇತನ ಶಾಲೆಯ ಮಕ್ಕಳು ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸ್ ತೆರಳುವಾಗ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ಮಕ್ಕಳನ್ನು ಕೆ.ಆರ್.ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದು ಸೀಮಾ ಲಾಟ್ಕರ್ ತಿಳಿಸಿದರು.
ನರಸಿಂಹರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 'ಕಾಂತಾರ' ನೃತ್ಯ ಕಲಾವಿದರಿದ್ದ ಮಿನಿ ಬಸ್ ಪಲ್ಟಿ; ಶೂಟಿಂಗ್ ಬಗ್ಗೆ ನಿರ್ಮಾಪಕರು ಹೇಳಿದ್ದೇನು?