ಬೆಂಗಳೂರು:ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಕೆಎಸ್‌ಆರ್‌ಟಿಸಿ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ) ಮುಂದಾಗಿದೆ.
ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಿಲ್ಲ. ಈಗ ಟಿಕೆಟ್ ದರ ಹೆಚ್ಚಳ ಮಾಡದಿದ್ದರೆ ನಿಗಮಕ್ಕೆ ದೊಡ್ಡ ಹೊರೆ ಬೀಳಬಹುದು. ಹೀಗಾಗಿ, ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ನೌಕರರಿಗೆ ಸಂಬಳ ಹೆಚ್ಚಳ ಮತ್ತು ಇತರೆ ಸವಲತ್ತುಗಳನ್ನು ಕೊಡಬೇಕಾದರೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. 2020ರಲ್ಲಿಯೇ ಕೆಎಸ್‌ಆರ್‌ಟಿಸಿ ನೌಕರರ ವೇತನ ಪರಿಷ್ಕರಣೆ ಮಾಡಬೇಕಿತ್ತು. ಆದರೆ, ಬಸ್ ಟಿಕೆಟ್ ದರ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಆರ್ಥಿಕ ಸಮಸ್ಯೆ ಉಂಟಾಗಬಾರದೆಂಬ ದೃಷ್ಟಿಯಿಂದ ಇಲ್ಲಿಯವರೆಗೂ ನೌಕರರ ವೇತನ ಪರಿಷ್ಕರಣೆ ಮಾಡಿಲ್ಲ. ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡಬೇಕಿದೆ. ಹಾಗಾಗಿ ಬೆಲೆ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.