ಬೆಂಗಳೂರು:ಕೇಂದ್ರ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಶದಾಯಕವಾಗಿದೆ. ಪ್ರಧಾನಿ ಮೋದಿ ಸರ್ಕಾರದ ಮೇಲೆ ರೈತರು ಇಟ್ಟಿದ್ದ ಭರವಸೆಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದ ಮುಂಗಡ ಪತ್ರದಲ್ಲಿ ಈಡೇರಿಸಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೋದಿ ಭರವಸೆ ಹುಸಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು. ಅದು ಸಹ ಹುಸಿಯಾಗಿದೆ. ಕೇಂದ್ರ ಸರ್ಕಾರದಿಂದ ರೈತರ ಅಭ್ಯುದಯ ಈವರೆಗೂ ಸಾಧ್ಯವಾಗಿಲ್ಲ ಎಂದು ಬಜೆಟ್ ಬಗ್ಗೆ ಈಟಿವಿ ಭಾರತ ಜೊತೆಗೆ ಕುರುಬೂರು ಶಾಂತಕುಮಾರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ನಿರ್ಲಕ್ಷ್ಯ:ಕೃಷಿಕರ ಅಭಿವೃದ್ಧಿಗೆ ಸ್ವಾಮಿನಾಥನ್ ವರದಿ ಅನುಷ್ಠಾನ ಮಾಡುವುದಾಗಿ ಪ್ರಧಾನಿ ಆಶ್ವಾಸನೆ ನೀಡಿದ್ದರು. ಅದನ್ನೂ ಸಹ ಈಡೇರಿಸಿಲ್ಲ. ರೈತರು ಬರಗಾಲದ ಪರಿಸ್ಥಿತಿಗೆ ಸಿಲುಕಿ ನಲುಗುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರ ಕೃಷಿ ಸಾಲ ಮನ್ನಾ ಮಾಡುತ್ತಾರೆ ಎನ್ನುವ ನಿರೀಕ್ಷೆಗಳಿದ್ದವು, ಅದೂ ಸಹ ಸುಳ್ಳಾಗಿದೆ ಎಂದರು.