ಬೆಂಗಳೂರು:ಡಿಸೆಂಬರ್ 31 ರಿಂದ ನಡೆಯಲಿರುವ ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಸಭೆಯನ್ನು ಸೋಮವಾರ ಡಿಸೆಂಬರ್ 30ಕ್ಕೆೆ ಮುಂದೂಡಲಾಗಿದೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಸದಸ್ಯರನ್ನೊಳಗೊಂಡ ಜಂಟಿ ಕ್ರಿಯಾ ಸಮಿತಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘದ ಮುಖಂಡ ಹೆಚ್.ವಿ. ಅನಂತ ಸುಬ್ಬರಾವ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ನಡೆಸಲಿರುವ ಸಭೆಯನ್ನು ಡಿಸೆಂಬರ್ 30ಕ್ಕೆೆ ಮುಂದೂಡಲಾಗಿದೆ.
"ಸರ್ಕಾರ ನಮ್ಮನ್ನು ಕರೆದು ಚರ್ಚಿಸಲಿ ಎನ್ನುವ ಕಾರಣಕ್ಕೆೆ ನೋಟಿಸ್ ನೀಡಿದ್ದೇವೆ. ಆದರೆ ಸರ್ಕಾರ ಈವರೆಗೆ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಬದಲಿಗೆ ಮುಷ್ಕರ ಮಾಡಿದರೆ ಎಸ್ಮಾ ಜಾರಿ ಮಾಡುತ್ತೇವೆ" ಎಂದು ಹೇಳಿದ್ದಾರೆ ಎಂದು ದೂರಿದ್ದಾರೆ.
"ಸಿದ್ದರಾಮಯ್ಯ ಅವರು ಇಂತಹ ಸಾಹಸಕ್ಕೆೆ ಕೈ ಹಾಕುವುದಿಲ್ಲ ಎಂದು ತಿಳಿದುಕೊಳ್ಳುತ್ತೇನೆ. ನಮ್ಮ ಬೇಡಿಕೆಗಳು ಈಡೇರಿಲ್ಲ. ಹಾಗಾಗಿ ಮುಷ್ಕರ ಶತಸಿದ್ಧ. ಮುಷ್ಕರ ಮಾಡಿಸುವುದು ತಪ್ಪಿಸುವುದು ಸಿಎಂ ಕೈಯಲ್ಲಿದೆ. ನಗದು ರಹಿತ ಆರೋಗ್ಯ ಚಿಕಿತ್ಸೆೆ ಯೋಜನೆಯನ್ನು ಏಕಕಾಲದಲ್ಲಿ 4 ನಿಗಮಗಳಲ್ಲಿ ಜಾರಿಗೆ ತರಬೇಕು. ಸಂಸ್ಥೆೆಯಲ್ಲಿ ವಿದ್ಯುತ್ ಚಾಲಿತ ಬಸ್ಸುಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ಧತಿಯನ್ನು ಕೈಬಿಟ್ಟು, ಸಂಸ್ಥೆೆಯ ನೌಕರರು ಮತ್ತು ಸಿಬ್ಬಂದಿ ನಿರ್ವಹಣೆ ಮಾಡಬೇಕು. ಹೊರ ಗುತ್ತಿಗೆ ಆಧಾರದ ಮೇಲೆ ಚಾಲಕ, ತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿ ನೇಮಕಾತಿಯನ್ನು ಕೈಬಿಡಬೇಕು ಎಂಬುದು ಸಾರಿಗೆ ನೌಕರರ ಆಗ್ರಹವಾಗಿದೆ" ಎಂದು ಕಾರ್ಮಿಕ ಮುಖಂಡ ಹೆಚ್.ವಿ.ಅನಂತ ಸುಬ್ಬರಾವ್ ಹೇಳಿದ್ದಾರೆ.
01-01-2020ರಿಂದ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ ನಂತರದ 38 ತಿಂಗಳ ಬಾಕಿ ಹಣವನ್ನು ವಿಳಂಬವಿಲ್ಲದೆ ಪಾವತಿಸುವುದು, ಸದ್ಯ ನೌಕರರು ಪಡೆಯುತ್ತಿರುವ ವಿವಿಧ ಭತ್ಯೆಗಳನ್ನು ಐದು ಪಟ್ಟು ಹೆಚ್ಚಳ ಮಾಡುವುದು, ಎಲ್ಲಾ ನೌಕರರಿಗೂ ಪ್ರತೀ ತಿಂಗಳೂ ಹೊರ ರೋಗಿ ಚಿಕಿತ್ಸೆ ವೆಚ್ಚಕ್ಕಾಗಿ ಎರಡು ಸಾವಿರ ರೂಪಾಯಿ ಜೊತೆಗೆ ಉಚಿತ ಔಷಧಿ ನೀಡುವುದು, ಇಎಸ್ಐ ಮಾದರಿಯಲ್ಲಿ ನೌಕರರ ಮೂಲ ವೇತನದ ಶೇ.4.5 ಹಾಗೂ ನೌಕರರಿಂದ ಶೇ.0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಕೊಡುವ ಯೋಜನೆ ರೂಪಿಸಬೇಕು. ನಿವೃತ್ತ ನೌಕರರು ಮತ್ತು ಅವರ ಪತಿ/ಪತ್ನಿ ಹಾಗೂ ಮಕ್ಕಳಿಗೂ ಆರೋಗ್ಯ ಯೋಜನೆ ನೀಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿದೆ.
ಇದನ್ನೂ ಓದಿ:ಹೊಸ ವರ್ಷಾಚರಣೆ: ಡಿ.31ರಿಂದ ಜ.1ರ ನಸುಕಿನ 2 ಗಂಟೆಯವರೆಗೆ ಬಿಎಂಟಿಸಿ ಬಸ್ ಸೇವೆ