ಬೆಂಗಳೂರು:''ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು. ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನೂ ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಖತ್ ತೋರಿಸಬೇಕು. ಆಗಾಗ ಗೊಣಗಾಡಿದರೆ ಫಲವೇನು'' ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ''ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ''ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ'' ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ. ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನನ್ನ ಸವಾಲು ಕೂಡಾ ಹೌದು'' ಎಂದಿದ್ದಾರೆ.
''ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನ ತೋರಿಸುತ್ತದೆ'' ಎಂದು ಕಿಡಿಕಾರಿದ್ದಾರೆ.
''ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ. ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆ. ಬಡಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಧಿಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ. ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರು ಗರೀಬಿ ಹಠಾವೋ ಎಂದು ಕರೆ ನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು'' ಎಂದು ಒತ್ತಾಯಿಸಿದ್ದಾರೆ.