ಬೆಂಗಳೂರು:ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ(ಪೋಕ್ಸೋ) ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೈಲಿಗೆ ಹೋಗುತ್ತಾರೆ ಎಂದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ, ನ್ಯಾಯಾಲಯದಲ್ಲಿ ಮಾತ್ರ ಸರ್ಕಾರ ವಿಚಾರಣೆ ಮುಂದೂಡುವಂತೆ ಮನವಿ ಮಾಡುತ್ತಿದೆ ಎಂದು ಬಿಎಸ್ವೈ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಜಾಮೀನು ಕೋರಿ ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿಯ ವಿಚಾರಣೆ ವೇಳೆ ಸಿಐಡಿ ಪರ ವಾದ ಮಂಡಿಸಿದ ವಿಶೇಷ ವಕೀಲರು, ಪ್ರಕರಣ ಸಂಬಂಧ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಕೆ ಮಾಡಬೇಕಾಗಿದೆ. ಇದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು.