ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಮೈಸೂರು ಜಿಲ್ಲೆಯಲ್ಲಿ ಎನ್‌ಡಿಎ ಮೈತ್ರಿಕೂಟವು ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಪ್ರತಿಷ್ಠಾಪಿಸುವ ಮೂಲಕ ಬೃಹತ್ ರಾಜಕೀಯ ಸಂದೇಶ ರವಾನೆ ಮಾಡುವುದಕ್ಕೆ ಭರ್ಜರಿ ತಯಾರಿ ನಡೆಸಿದೆ. ಈ ಸಮಾವೇಶವನ್ನು ಬಿಜೆಪಿ-ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆಯ ನೈಜ ರಣಕಹಳೆ ಮೊಳಗಿಸಲು ಕಾರ್ಯತಂತ್ರ ಹೆಣೆದಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲು ಪ್ರಧಾನಿ ಮೋದಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಮೈಸೂರು ಹಾಗೂ ಮಂಗಳೂರಲ್ಲಿ ಏಳು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ವಿರುದ್ಧ ಸಮರ ಸಾರಲು ಮೈಸೂರಿನಲ್ಲಿ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಜೆಡಿಎಸ್, ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡ ನಂತರ ಇದೇ ಮೊದಲ ಬಾರಿಗೆ ಮೋದಿ ಹಾಗೂ ದೇವೇಗೌಡರು ಇಂದು ಸಂಜೆ ನಡೆಯುವ ಚುನಾವಣಾ ಪ್ರಚಾರದ ವೇದಿಕೆಯಲ್ಲಿ ಮೈತ್ರಿ ಧರ್ಮಪಾಲನೆ ಬಗ್ಗೆ ಮಾತನಾಡಲಿದ್ದಾರೆ. ದೋಸ್ತಿಗಳ ಒಗ್ಗಟ್ಟು ಪ್ರದರ್ಶನದ ಮೂಲಕ ಕಾರ್ಯಕರ್ತರ ಭಿನ್ನಮತ ನಿವಾರಣೆಗೆ ತಂತ್ರ ರೂಪಿಸಲಾಗಿದೆ. ಮೈಸೂರಿನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಸೆಡ್ಡು ಹೊಡೆಯುವುದು ಎನ್‌ಡಿಎ ಮೈತ್ರಿಕೂಟದ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.