ಬೆಂಗಳೂರು:ಲೋಕಸಭಾ ಚುನಾವಣೆ ಕ್ಷೇತ್ರ ಹಂಚಿಕೆ, ಕಾರ್ಯತಂತ್ರ, ಪ್ರಚಾರ, ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಕುಮಾರಸ್ವಾಮಿ ಅವರು ಇಂದು ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಕ್ಷೇತ್ರ ಹಂಚಿಕೆ ವಿಚಾರವನ್ನು ಮಾತುಕತೆ ಸಂದರ್ಭದಲ್ಲಿ ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್‍ಗೆ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಬಿಟ್ಟುಕೊಡಲಿದೆ ಎಂದು ಹೇಳಲಾಗುತ್ತಿದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಈಗಾಗಲೇ ಸಮ್ಮತಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ತುಮಕೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಪೈಕಿ ಯಾವುದಾದರೂ ಒಂದು ಕ್ಷೇತ್ರವನ್ನು ಜೆಡಿಎಸ್‍ಗೆ ಬಿಜೆಪಿ ಬಿಟ್ಟುಕೊಡುವ ನಿರೀಕ್ಷೆ ಇದೆ ಎನ್ನಲಾಗಿದೆ.
ಈಗಾಗಲೇ ಕುಮಾರಸ್ವಾಮಿಯವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಹಲವು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ. ಈ ಬಾರಿ ಚುನಾವಣಾ ಪೂರ್ವ ಮೈತ್ರಿ ವಿಚಾರ ಅಂತಿಮಗೊಳ್ಳಲಿದೆ. ಉಭಯ ಪಕ್ಷಗಳ ಅಭ್ಯರ್ಥಿ ಆಯ್ಕೆ ವಿಚಾರ, ಎನ್‍ಡಿಎ ಅಭ್ಯರ್ಥಿಗಳ ಪರವಾಗಿ ಜಂಟಿ ಪ್ರಚಾರ, ಕಾಂಗ್ರೆಸ್ ಮಣಿಸಲು ಉಭಯ ಪಕ್ಷಗಳು ಕೈಗೊಳ್ಳಬೇಕಿರುವ ಕಾರ್ಯತಂತ್ರ ಮೊದಲಾದ ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿ ಸಲಹೆ ಸೂಚನೆಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ ಬಳಿಕ ರಾಜ್ಯದಲ್ಲಿ ಪಕ್ಷದ ವತಿಯಿಂದ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕುಮಾರಸ್ವಾಮಿ ಪ್ರಕಟಿಸಲಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಿಜೆಪಿಯೊಂದಿಗಿನ ಕ್ಷೇತ್ರ ಹಂಚಿಕೆಗೆ ಸಂಬಂಧಿಸಿದ ಮಾತುಕತೆ ನಡೆಸುವ ಜವಾಬ್ದಾರಿಯನ್ನು ಕುಮಾರಸ್ವಾಮಿಯವರಿಗೆ ವಹಿಸಿದ್ದಾರೆ. ಅದರಂತೆ ಕುಮಾರಸ್ವಾಮಿ ಈಗಾಗಲೇ ಕ್ಷೇತ್ರವಾರು ಪಕ್ಷದ ಮುಖಂಡರ ಸಭೆ ನಡೆಸಿ ಅಭಿಪ್ರಾಯ ಪಡೆದಿದ್ದಾರೆ. ಚುನಾವಣಾ ಪೂರ್ವ ತಯಾರಿ ಸಂದರ್ಭದಲ್ಲಿ ವ್ಯಕ್ತವಾದ ಅಭಿಪ್ರಾಯದ ಸಾರಾಂಶವನ್ನು ಬಿಜೆಪಿ ನಾಯಕರ ಗಮನಕ್ಕೂ ತರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಓದಿ:ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಪೌರತ್ವ ತಿದ್ದಪಡಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರ
ಸೋಮವಾರ ದೆಹಲಿಯಲ್ಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಸಿ, ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಿದೆ. ಕೇಂದ್ರೀಯ ಚುನಾವಣಾ ಸಮಿತಿ ಸಭೆ ಸದಸ್ಯ ಬಿ ಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು.