ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7ರಂದು ನಡೆಯಲಿದೆ. ಆ ದಿನಗಳಂದು ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ, ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ 26.04.2024 ಮತ್ತು 7.05.2024ರಂದು ನಡೆಯುವ ಚುನಾವಣೆಗೆ ಸಾರ್ವತ್ರಿಕ ರಜೆ ಘೋಷಿಸಿದೆ.