ಬೆಂಗಳೂರು:ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಆದೇಶಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಔಷಧ ನಿಯಂತ್ರಕರು ಹಾಗೂ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಬಳ್ಳಾರಿ ಸರ್ಕಾರಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ನಿರ್ದೇಶಿಸಿದ್ದಾರೆ.
ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರಿಗೆ ಪ್ರತ್ಯೇಖವಾಗಿ ಸರ್ಚ್ ವಾರೆಂಟ್‌ಗಳನ್ನು ನೀಡಿ, ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಔಷಧ ಉಗ್ರಾಣವನ್ನು ತಪಾಸಣೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅಲ್ಲದೇ, ಈ ರೀತಿಯ ಘಟನೆಗಳು ಬೇರೆ ಯಾವುದಾದರೂ ಜಿಲ್ಲೆಯಲ್ಲಿಯೂ ಸಹಾ ಜರುಗಿರಬಹುದಾದ ಸಂಭವವಿರುವುದರಿಂದ, ಆ ಜಿಲ್ಲೆಗಳಲ್ಲಿ ಸದ್ಯ ಔಷಧಿ ಸರಬರಾಜು ಮಾಡಿರುವ ಬಗ್ಗೆ ಮಾಹಿತಿ ನೀಡುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಲೋಕಾಯುಕ್ತರು ಆದೇಶಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಘಟನೆ ಸಂಬಂಧ ವಿವರವಾದ ವರದಿ. ಈ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಹಾಗೂ ದುರ್ಘಟನೆಗೆ ಕಾರಣವಾದ ಔಷಧವವನ್ನು ನಿಯಂತ್ರಿಸಲು ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.