ದಾವಣಗೆರೆ:ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಮಲ್ಲಾಪುರ ಗ್ರಾಮದಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತೋಷ್ ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೃತ ಸಂತೋಷ್ ಕುಮಾರ್ ವೈವಾಹಿಕ ಜೀವನಕ್ಕೆ ಕಾಲಿಟ್ಟು ನಾಲ್ಕು ವರ್ಷಗಳಾಗಿತ್ತು. ಮದುವೆಯಾಗಿ ಇಷ್ಟು ವರ್ಷಗಳಾದರೂ ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಂತೋಷ್ ದೊಡ್ಡಮಲ್ಲಾಪುರ ಗ್ರಾಮದ ನಿವಾಸಿಯಾಗಿದ್ದು, ಅವರ ಪತ್ನಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಹಾಗಾಗಿ ಬೆಂಗಳೂರಿನಲ್ಲೇ ಮನೆ ಮಾಡಿಕೊಂಡು ಅಲ್ಲಿಯೇ ವಾಸವಾಗಿದ್ದರು. ರಜೆ ದಿನಗಳಲ್ಲಿ ದೊಡ್ಡಮಲ್ಲಾಪುರ ಗ್ರಾಮಕ್ಕೆ ಆಗಮಿಸಿತ್ತಿದ್ದರು. ಮೇ 7ಕ್ಕೆ ನಡೆದ ಲೋಕಸಭಾ ಚುನಾವಣೆಗೆ ಮತದಾನ ಮಾಡಲು ಸಂತೋಷ್ ತಮ್ಮ ಗ್ರಾಮಕ್ಕಾಗಮಿಸಿದ್ದರು. ಮತ ಚಲಾಯಿಸಿ ಮರಳಿ ಬೆಂಗಳೂರಿಗೆ ತೆರಳದೇ ಸ್ವಗ್ರಾಮದಲ್ಲೇ ಕುಟುಂಬಸ್ಥರೊಂದಿಗೆ ಉಳಿದುಕೊಂಡಿದ್ದರು. ಮನೆಯಲ್ಲಿಯಲ್ಲಿ ಯಾರೂ ಇಲ್ಲದ ವೇಳೆ ಮೇ 12 ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸಂತೇಬೆನ್ನೂರು ಪೊಲೀಸ್ ಠಾಣೆಯ ಎಸ್ಐ ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡು ಎರಡು ದಿನಗಳ ಬಳಿಕ (ಮೇ 14) ಮನೆಯಿಂದ ವಾಸನೆ ಬರುತ್ತಿರುವುದನ್ನು ಗಮನಿಸಿದಾಗ ಶವ ಪತ್ತೆಯಾಗಿದೆ. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಸಂತೇಬೆನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಸ್ಐ ದೀಪಾ ಹೇಳಿದ್ದೇನು: ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಇದು ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ. ಈಗಾಗಲೇ ಇದರ ಸಂಬಂಧ ಯುಡಿಆರ್ ನಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಸಂತೇಬೆನ್ನೂರು ಎಸ್ಐ ದೀಪಾ ಮಾಹಿತಿ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಮೂವರು ಸಾವು:ಒಂದೇ ದಿನ ಎರಡು ಕಡೆ ಅಪರಿಚಿತ ಶವಗಳು ಪತ್ತೆ, ಓರ್ವ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ಆಲಂಬಾಡಿ ಬಳಿ ಗುರುವಾರ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾದರೆ, ಜ್ಯೋತಿಗೌಡನಪುರ ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಸಿಕ್ಕಿದೆ. ಮೃತರ ಇಬ್ಬರ ಗುರುತು ಪತ್ತೆಯಾಗಿಲ್ಲ. ಮೊದಲನೇ ಪ್ರಕರಣ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದರೆ, ಎರಡನೇ ಪ್ರಕರಣ ಚಾಮರಾಜನಗರ ಪೂರ್ವ ಠಾಣೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಮತ್ತೊಂದೆಡೆ ಯುವಕನೊಬ್ಬ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಜರುಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ಸರಹದ್ದಿನ ಗೋಪಿನಾಥಂ ಗ್ರಾಮದ ನಿವಾಸಿ ಪಟ್ಟಗಾರ ಮುರುಗೇಶ್ ಪುತ್ರ ತಮಿಳ್ ಮೃತಪಟ್ಟ ದುರ್ದೈವಿ. ಮಲೆ ಮಹದೇಶ್ವರ ಬೆಟ್ಟದಲ್ಲಿ ಕೆಲಸ ಮುಗಿಸಿಕೊಂಡು ಗೋಪಿನಾಥಂ ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ತಮಿಳ್ ಏಳನೇ ಕ್ರಾಸಿನ ಬಳಿ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು ನೀರಲ್ಲಿ ಮುಳುಗಿ ಸಾವು - FOUR BOYS DIED