ಬೆಂಗಳೂರು:ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರಲಿದ್ದಾರೆ. ಬೆಳಗ್ಗೆ 11.30ಕ್ಕೆ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಲತಾ ಬಿಜೆಪಿಯ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಕಮಲ ಪಕ್ಷ ಸೇರ್ಪಡೆ ಆಗಲಿದ್ದಾರೆ.
ಶುಕ್ರವಾರ ಬೆಳಗ್ಗೆ ಬಿಜೆಪಿ ಸೇರ್ಪಡೆ ಆಗುತ್ತಿರುವ ಬಗ್ಗೆ ಸುಮಲತಾ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ''ಮಂಡ್ಯದ ಅಭಿವೃದ್ಧಿಯನ್ನೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಅದರಂತೆಯೇ, ಬಿಜೆಪಿ ನಾಯಕರ ಸಮ್ಮುಖದಲ್ಲಿ ಏಪ್ರಿಲ್ 5ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗುತ್ತಿರುವೆ. ನಮ್ಮ ಕರುನಾಡಿನ ಸಕ್ಕರೆಯ ನಾಡು ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳು, ಡಾ.ಅಂಬರೀಶ್ ಅಭಿಮಾನಿಗಳು ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ನನ್ನ ಸವಿನಯ ಕೋರಿಕೆ'' ಎಂದು ಬರೆದುಕೊಂಡಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ಗಾಗಿ ಸುಮಲತಾ ಸಾಕಷ್ಟು ಹೋರಾಟ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಮಂಡ್ಯ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದಲ್ಲದೇ, ಬೇರೆ ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಸುಮಲತಾಗೆ ಆಫರ್ ನೀಡಲಾಗಿತ್ತು. ಆದರೆ, ಸುಮಲತಾ ಮಂಡ್ಯ ಹೊರತುಪಡಿಸಿ ಬೇರೆ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎನ್ನುವ ಅಚಲ ನಿರ್ಧಾರ ತೆಗೆದುಕೊಂಡಿದ್ದರು. ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲಿದ್ದಾರೆ ಎನ್ನುವ ಮಾತುಗಳೂ ರಾಜಕೀಯ ವಲಯದಲ್ಲಿ ಕೇಳಿ ಬಂದಿದ್ದವು.