ಕರ್ನಾಟಕ

karnataka

ETV Bharat / state

ಮಂಗಳೂರು ಲೋಕಸಭಾ ಕ್ಷೇತ್ರ: ಬಿಜೆಪಿ ಟಿಕೆಟ್ ಯಾರಿಗೆ?

ಈ ಬಾರಿಯ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಆಕಾಂಕ್ಷಿಗಳಾಗಿ ಐವರು ಕಣದಲ್ಲಿದ್ದಾರೆ.

ಮಂಗಳೂರು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು
ಮಂಗಳೂರು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು

By ETV Bharat Karnataka Team

Published : Feb 21, 2024, 9:17 PM IST

ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಬಗ್ಗೆ ಕುತೂಹಲ ಗರಿಗೆದರಿದೆ. ಕಮಲ ಪಕ್ಷ ಪ್ರಾಬಲ್ಯದ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿ ಯಾರು? ಯಾರಿಗೆ ಟಿಕೆಟ್ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಬಿಜೆಪಿ ಜಯ ಗಳಿಸುತ್ತಿದೆ. ಧನಂಜಯ ಕುಮಾರ್, ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗಳಾಗಿ ಜಯ ಗಳಿಸುತ್ತಿದ್ದಾರೆ. 1991 ರಿಂದ ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಸತತವಾಗಿ ಜಯಗಳಿಸುತ್ತ ಬಂದಿದ್ದಾರೆ. 1991 ರಿಂದ 1999ರ ವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ ಧನಂಜಯ ಕುಮಾರ್ 2004ಕ್ಕೆ ಡಿ ವಿ ಸದಾನಂದ ಗೌಡ, 2009 ರಿಂದ 2019ರ ವರೆಗೆ ನಳಿನ್ ಕುಮಾರ್ ಕಟೀಲ್ ಅಭ್ಯರ್ಥಿಯಾಗಿ ಜಯ ಗಳಿಸಿದ್ದಾರೆ. ಈಗಾಗಲೇ ಮೂರು ಬಾರಿ ಬಿಜೆಪಿಯಿಂದ ಗೆದ್ದಿರುವ ನಳಿನ್ ಕುಮಾರ್ ಕಟೀಲ್ ನಾಲ್ಕನೇ ಬಾರಿಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.

ಮಂಗಳೂರು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಿದ್ದರೂ ಬಿಜೆಪಿ ಅಭ್ಯರ್ಥಿಗಳಾಗಳು ಹಲವರು ಆಕಾಂಕ್ಷಿಗಳಿದ್ದಾರೆ. ನಳಿನ್ ಕುಮಾರ್ ಕಟೀಲ್, ಕ್ಯಾ.ಬ್ರಜೇಶ್ ಚೌಟ, ಸತ್ಯಜಿತ್ ಸುರತ್ಕಲ್, ಅರುಣ್ ಕುಮಾರ್ ಪುತ್ತಿಲ, ನಾಗರಾಜ್ ಶೆಟ್ಟಿ ಆಕಾಂಕ್ಷಿಗಳಾಗಿದ್ದಾರೆ.

ಆಕಾಂಕ್ಷಿಗಳ ವಿವರ:

ನಳಿನ್ ಕುಮಾರ್ ಕಟೀಲ್:ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು 3 ಬಾರಿ ವಿಜಯಿಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ನಾಲ್ಕನೇ ಬಾರಿಗೆ ಸ್ಪರ್ಧಿಸಲು ಉತ್ಸುಕರಾಗಿದ್ದು ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.

ಕ್ಯಾ‌.ಬ್ರಜೇಶ್ ಚೌಟ: ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ಕ್ಯಾ. ಬ್ರಜೇಶ್ ಚೌಟ ಸದ್ಯ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಲ್ಲೊಬ್ಬರು. ಯಡಿಯೂರಪ್ಪ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಬ್ರಜೇಶ್ ಚೌಟ 2019ರಲ್ಲಿಯೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಾರಿ ನಳಿನ್ ಕುಮಾರ್ ಕಟೀಲ್​ಗೆ ಬಿಜೆಪಿ ಟಿಕೆಟ್ ಕೈತಪ್ಪಿದರೆ ಬ್ರಜೇಶ್ ಚೌಟ ಅವರಿಗೆ ಸಿಗುವ ಸಾಧ್ಯತೆ ಹೆಚ್ಚು.

ಮಂಗಳೂರು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು

ಸತ್ಯಜಿತ್ ಸುರತ್ಕಲ್: ಹಿಂದೂ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಸತ್ಯಜಿತ್ ಸುರತ್ಕಲ್ 2019ರಲ್ಲಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕರಾವಳಿಯಲ್ಲಿ ಪ್ರಬಲ ಸಮುದಾಯವಾಗಿರುವ ಬಿಲ್ಲವ ಸಮುದಾಯದವರಾಗಿರುವ ಸತ್ಯಜಿತ್ ಸುರತ್ಕಲ್ ಒಂದೊಮ್ಮೆ ಹಿಂದುತ್ವದ ಹೆಸರಿನಲ್ಲಿ ಪ್ರಬಲ ಹೋರಾಟ ಮಾಡಿದ್ದರು. ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಅರುಣ್ ಕುಮಾರ್ ಪುತ್ತಿಲ:ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಎರಡನೇ ಸ್ಥಾನಕ್ಕೆ ಬಂದಿದ್ದರು. ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿತ್ತು. ಅವರು ಮತ್ತೆ ಬಿಜೆಪಿಗೆ ಬರಲು ಉತ್ಸುಕರಾಗಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಮಂಗಳೂರು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು

ನಾಗರಾಜ್ ಶೆಟ್ಟಿ:ಮಾಜಿ ಸಚಿವ ಬಿ ನಾಗರಾಜ್ ಶೆಟ್ಟಿ ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಸಿಗದಿದ್ದರೆ ತನ್ನನ್ನು ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಮಂಗಳೂರು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ದಕ್ಷಿಣ ಕನ್ನಡ ಜಿಲ್ಲೆಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸುವ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ: ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ

ABOUT THE AUTHOR

...view details