ಮಂಗಳೂರು: ಲೋಕಸಭಾ ಚುನಾವಣೆ ಸನಿಹ ಬರುತ್ತಿದ್ದಂತೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಬಗ್ಗೆ ಕುತೂಹಲ ಗರಿಗೆದರಿದೆ. ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬ ಕುತೂಹಲ ಹೆಚ್ಚಿಸಿದೆ.
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಬಲವಾಗಿದ್ದರೂ, ಕಳೆದ ಮೂರು ದಶಕಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ. ಕಳೆದ ಮೂರು ದಶಕಗಳಿಂದ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೇ ಜಯಗಳಿಸುತ್ತಿದ್ದಾರೆ. 1989 ರಲ್ಲಿ ಚುನಾವಣೆಯಲ್ಲಿ ಗೆದ್ದ ಬಳಿಕ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಇಲ್ಲ.
1952 ರಿಂದ 1989ರ ತನಕ ಮಂಗಳೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. 1952ರಲ್ಲಿ ಕಾಂಗ್ರೆಸ್ ಪಕ್ಷದಿಂದ ಬೆನಗಲ್ ಶಿವರಾವ್, 1957ರಲ್ಲಿ ಕೆ ಆರ್ ಆಚಾರ್, 1962 ರಲ್ಲಿ ಅದೂರು ಶಂಕರ್ ಆಳ್ವ, 1967 ಸಿ ಮುತ್ತಣ್ಣ ಪುಣಚ, 1971ರಲ್ಲಿ ಕೆ ಕೆ ಶೆಟ್ಟಿ, 1977, 1980, 1984, 1989 ರಲ್ಲಿ ಜನಾರ್ದನ ಪೂಜಾರಿ ಕಾಂಗ್ರೆಸ್ನಿಂದ ಜಯ ಸಾಧಿಸಿದ್ದರು. 1991ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಬಳಿಕ ಬಿಜೆಪಿ ಪ್ರಬಲವಾಗಿ ಕಾಂಗ್ರೆಸ್ ಚುನಾವಣೆಯಲ್ಲಿ ಸೋಲನ್ನು ಕಂಡಿದ್ದು, ಆ ಬಳಿಕ ಯಾವ ಚುನಾವಣೆಯಲ್ಲಿಯೂ ಗೆಲುವು ಕಂಡಿಲ್ಲ.
ಸತತ 8 ಬಾರಿ ಸೋಲಿನ ನಂತರ ಮತ್ತೆ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವು ಮುಖಂಡರು ಬಯಸುತ್ತಿದ್ದಾರೆ. ಮಾಜಿ ಸಚಿವರಾದ ಬಿ ರಮಾನಾಥ ರೈ, ವಿನಯಕುಮಾರ್ ಸೊರಕೆ, ಪದ್ಮರಾಜ್ ಆಕಾಂಕ್ಷಿಗಳಾಗಿದ್ದು, ಟಿಕೆಟ್ಗಾಗಿ ಪ್ರಯತ್ನಿಸುತ್ತಿದ್ದಾರೆ.
ಪ್ರಬಲ ಆಕಾಂಕ್ಷಿಗಳು ಯಾರು?:
ರಮಾನಾಥ ರೈ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡ ಬಿ ರಮಾನಾಥ ರೈ ಕಾಂಗ್ರೆಸ್ ಪಕ್ಷದ ಕಟ್ಟಾಳು ನಾಯಕ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 9 ಬಾರಿ ಸ್ಪರ್ಧಿಸಿದ್ದಾರೆ. ಇಲ್ಲಿ ಗೆದ್ದು ಸಚಿವ ಕೂಡ ಆಗಿದ್ದರು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲುಂಡಿದ್ದು, ಇದೀಗ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಮಂಗಳೂರು ಲೋಕಸಭಾ ಕ್ಷೇತ್ರದಿಂದ ತಮಗೆ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. ಇವರು ಕರಾವಳಿಯ ಪ್ರಮುಖ ಸಮುದಾಯವಾಗಿರುವ ಬಂಟ ಸಮುದಾಯಕ್ಕೆ ಸೇರಿದವರು.
ವಿನಯಕುಮಾರ್ ಸೊರಕೆ: ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದಾರೆ. ವಿನಯಕುಮಾರ್ ಸೊರಕೆ ಮೂಲ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಅವರು, ಅಲ್ಲಿನ ಸೋಲಿನ ಬಳಿಕ ಉಡುಪಿ ಜಿಲ್ಲೆಗೆ ಹೋಗಿ ಉಡುಪಿಯಲ್ಲಿ ಸಂಸದರಾಗಿದ್ದರು. ಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಆದರೆ ಈ ಬಾರಿ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದಾರೆ. ಇವರು ಕರಾವಳಿಯ ಪ್ರಮುಖ ಸಮುದಾಯವಾಗಿರುವ ಬಿಲ್ಲವ ಸಮುದಾಯಕ್ಕೆ ಸೇರಿದವರು.
ಪದ್ಮರಾಜ್:ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ವಕೀಲ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆಸಕ್ತಿ ಹೊಂದಿದ್ದಾರೆ. ಚುನಾವಣಾ ರಾಜಕೀಯಕ್ಕೆ ಅವರು ಹೊಸ ಮುಖ. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಸಕ್ತರಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಇದೀಗ ಮತ್ತೆ ಲೋಕಸಭೆಗೆ ಸ್ಪರ್ಧಿಸಲು ಪ್ರಯತ್ನ ಪಡುತ್ತಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಅವರ ಆಪ್ತರಾಗಿರುವ ಪದ್ಮರಾಜ್ ಕರಾವಳಿಯ ಪ್ರಮುಖ ಸಮುದಾಯವಾಗಿರುವ ಬಿಲ್ಲವ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಇದನ್ನೂ ಓದಿ :ಲೋಕಸಭೆ ಚುನಾವಣೆ: ನಾನು ಕೂಡ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿ: ಎಚ್ ವಿಶ್ವನಾಥ್