ಚಾಮರಾಜನಗರ:ರಾಜ್ಯ ಸರ್ಕಾರದಿಂದಲೇ ಇದೇ ಮೊದಲ ಬಾರಿಗೆ ಬೃಹತ್ ಆರೋಗ್ಯ ಶಿಬಿರವನ್ನು ಕೊಳ್ಳೇಗಾಲದ ಎಂಜಿಎಸ್ವಿ ಕಾಲೇಜು ಮೈದಾನದಲ್ಲಿ ನಡೆಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಬೃಹತ್ ಆರೋಗ್ಯ ಮೇಳದಲ್ಲಿ 7 ಸಾವಿರಕ್ಕೂ ಅಧಿಕ ರೋಗಿಗಳನ್ನು ತಪಾಸಣೆ ಮಾಡಲಾಯಿತು. ಈ ಬೃಹತ್ ಆರೋಗ್ಯ ಶಿಬಿರದಲ್ಲಿ ವೈದ್ಯಕೀಯ ವಿಭಾಗ, ಶಸ್ತ್ರಚಿಕಿತ್ಸೆ, ಮಕ್ಕಳ ವಿಭಾಗ, ಎಲುಬು ಮತ್ತು ಕೀಲು, ಮಾನಸಿಕ ರೋಗ, ಮೂತ್ರಪಿಂಡ, ಕಿವಿ, ಮೂಗು, ಗಂಟಲು, ಕಣ್ಣಿನ ವಿಭಾಗ, ಚರ್ಮರೋಗ, ದಂತ ವಿಭಾಗ, ಶ್ವಾಸಕೋಶ ವಿಭಾಗ, ಕ್ಯಾನ್ಸರ್, ಹೃದಯ, ಸ್ಕ್ಯಾನಿಂಗ್, ಸ್ತ್ರೀ ರೋಗ, ಎಂಡೋಕ್ರೊನೊಲಜಿ ಮತ್ತು ಆಯುರ್ವೇದ ವಿಭಾಗಗಳಲ್ಲಿ ಜನರು ತಪಾಸಣೆಗೆ ಒಳಗಾದರು.
ಮೇಳದಲ್ಲಿ ರಕ್ತದಾನ ಶಿಬಿರ, ಉಚಿತ ಪ್ರಯೋಗಾಲಯ ಪರೀಕ್ಷೆ, ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಪರೀಕ್ಷೆ, ಆಯುಷ್ಮಾನ್ ಭಾರತ್ ಪಿಎಂಜೆಎವೈ, ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಕಾರ್ಡ್ ನೊಂದಣಿ, ನೇತ್ರದಾನ ನೋಂದಣಿ, ಅಂಗಾಂಗ ದಾನ ನೋಂದಣಿ, ಕ್ಷಯ ರೋಗ ಪರೀಕ್ಷೆ, ಕೋವಿಡ್ ಪರೀಕ್ಷೆ, ಯೋಗ ಮತ್ತು ಧ್ಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲೆಯ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ನೋಂದಾಯಿಸಿದ್ದ 6,500 ರೋಗಿಗಳನ್ನು ವಾಹನ ವ್ಯವಸ್ಥೆ ಮಾಡಿ ಕರೆತರಲಾಗಿತ್ತು. ಅಲ್ಲದೇ 2 ಸಾವಿರಕ್ಕೂ ಅಧಿಕ ರೋಗಿಗಳು ನೇರವಾಗಿ ಆರೋಗ್ಯ ಮೇಳಕ್ಕೆ ಆಗಮಿಸಿ ಪರೀಕ್ಷೆಗೆ ಒಳಪಟ್ಟರು. ಆರೋಗ್ಯ ಮೇಳದಲ್ಲಿ 100ಕ್ಕೂ ಹೆಚ್ಚು ತಜ್ಞ ವೈದ್ಯರು, ಒಂದು ಸಾವಿರಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಕುಡಿಯುವ ನೀರು, ಮಧ್ಯಾಹ್ನದ ಊಟ ವ್ಯವಸ್ಥೆಯನ್ನು ಮಾಡಲಾಗಿತ್ತು.
ಆರೋಗ್ಯ ಮೇಳಕ್ಕೆ ಸಚಿವ ಚಾಲನೆ:ಬೃಹತ್ ಆರೋಗ್ಯ ಶಿಬಿರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ''ಹನೂರು, ರಾಮಾಪುರದಲ್ಲಿ ಏಕಬಳಕೆ ಡಯಾಲಿಸಿಸ್ ಕೇಂದ್ರ ತೆರೆಯಲಾಗುತ್ತದೆ. ಆರೋಗ್ಯ ಸೇವೆ ಜನರ ಬಳಿಗೇ ತೆಗೆದುಕೊಂಡು ಹೋಗಲು ಈ ಬೃಹತ್ ಆರೋಗ್ಯ ಶಿಬಿರ ಆಯೋಜನೆ ಮಾಡಿದೆ. ಸಮಗ್ರ ರೋಗ ತಪಾಸಣೆ, ಔಷಧಿ ವಿತರಣೆ ನೀಡಲಾಗುತ್ತದೆ. ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ತೆರೆಯಲು ಕ್ರಮ ವಹಿಸುತ್ತೇನೆ'' ಎಂದು ಭರವಸೆ ಕೊಟ್ಟರು.
ಆರೋಗ್ಯ ಶಿಬಿರದಲ್ಲಿ ತೆರೆಯಲಾಗಿದ್ದ ಪ್ರತಿ ಕೌಂಟರ್ಗೆ ಸಚಿವರಾದ ದಿನೇಶ್ ಗುಂಡೂರಾವ್, ಕೆ.ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಪಾಸಣೆಗೆ ಬಂದಿದ್ದ ಜನರನ್ನು ಮಾತನಾಡಿಸಿ ಆರೋಗ್ಯ ಶಿಬಿರವನ್ನು ಸದುಪಯೋಗ ಮಾಡಿಕೊಳ್ಳಿ ಎಂದು ಮನವಿ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಗಣೇಶ್ ಪ್ರಸಾದ್ ಇದ್ದರು.
ಇದನ್ನೂ ಓದಿ:ಮುಸ್ಲಿಮರ ಓಲೈಕೆಗೆ ಸಿಎಂ, ಡಿಸಿಎಂ ಭಾರಿ ಪೈಪೋಟಿ ನಡೆಸಿದ್ದಾರೆ: ಆರ್ ಅಶೋಕ್ ಟೀಕೆ