ಬೆಂಗಳೂರು :ಬರಗಾಲ ಮತ್ತು ಬೇಸಿಗೆ ಎರಡೂ ಸೇರಿಕೊಂಡು ನಮ್ಮ ದೇಶವೂ ಸೇರಿದಂತೆ ಜಗತ್ತಿನ ಎಲ್ಲೆಡೆಯೂ ನೀರಿನ ಕೊರತೆ ಉಂಟಾಗಿರುವುದು ನಿಸರ್ಗ ಸಹಜ ವಿದ್ಯಮಾನದ ಪರಿಣಾಮವಾಗಿದೆ. ಇದಕ್ಕೆ ಕೇರಳವೂ ಹೊರತಲ್ಲ. ಇಂತಹ ಸಂದರ್ಭದಲ್ಲಿ ಅಲ್ಲಿನ ಕೈಗಾರಿಕಾ ಸಚಿವ ಬೆಂಗಳೂರಿನಲ್ಲಿ ನೀರಿಲ್ಲವೆಂದು ತಮ್ಮ ರಾಜ್ಯಕ್ಕೆ ಬರುವಂತೆ ಇಲ್ಲಿನ ಐ.ಟಿ ಕಂಪನಿಗಳಿಗೆ ಆಹ್ವಾನ ನೀಡುತ್ತಿರುವುದು ಒಕ್ಕೂಟ ವ್ಯವಸ್ಥೆಯ ತತ್ವಕ್ಕೆ ವಿರುದ್ಧವಾಗಿದೆ. ಅವರ ಈ ನಡವಳಿಕೆ ಆರೋಗ್ಯಕರವಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಭಾನುವಾರ ಪತ್ರಿಕಾ ಹೇಳಿಕೆಯನ್ನು ಎಂ.ಬಿ ಪಾಟೀಲ್ ಬಿಡುಗಡೆ ಮಾಡಿದ್ದಾರೆ. ಕೇರಳದ ಕೈಗಾರಿಕಾ ಸಚಿವ ಪಿ.ರಾಜೀವ್ ಅವರು ನೀರಿನ ಕೊರತೆಯ ಹಿನ್ನೆಲೆಯಲ್ಲಿ ಬೆಂಗಳೂರನ್ನು ಬಿಟ್ಟು ತಮ್ಮ ರಾಜ್ಯಕ್ಕೆ ಬಂದು ನೆಲೆಯೂರುವಂತೆ ಐಟಿ ಕಂಪನಿಗಳಿಗೆ ಆಹ್ವಾನಿಸಿರುವ ಸಂಗತಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದು ಒಂದು ರೀತಿ ಕುಚೋದ್ಯದ ನಡೆ. ನಾವೆಲ್ಲರೂ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಅಂದ ಮೇಲೆ, ಪರಸ್ಪರ ಕೊಡು-ಕೊಳ್ಳುವಿಕೆ ಇರಬೇಕೇ ವಿನಾ ಪರಿಸ್ಥಿತಿಯ ದುರ್ಲಾಭ ಪಡೆಯಲು ನೋಡಬಾರದು. ಇದರಿಂದ ಕೊನೆಗೆ ಯಾರಿಗೂ ಒಳ್ಳೆಯದಾಗುವುದಿಲ್ಲ. ಈ ಪ್ರಾಥಮಿಕ ಸತ್ಯವನ್ನು ಕೇರಳದ ಸಚಿವರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಈ ವರ್ಷ ಜಗತ್ತಿನ ಬಹುತೇಕ ಕಡೆ ನೀರಿನ ಕೊರತೆ ಕಾಣಿಸಿಕೊಂಡಿದೆ. ಇದಕ್ಕೆ ಕೇರಳವೂ ಹೊರತಲ್ಲ. ಬೆಂಗಳೂರಿನಲ್ಲಿ ಐ.ಟಿ ಕಂಪನಿಗಳು ನೆಲೆಯೂರಿರುವ ಪ್ರದೇಶಗಳಲ್ಲಿ ಕೂಡ ಗಂಭೀರ ಸ್ವರೂಪದಲ್ಲೇನೂ ನೀರಿನ ಕೊರತೆ ಕಾಣಿಸಿಕೊಂಡಿಲ್ಲ. ಜತೆಗೆ ನಮ್ಮಲ್ಲಿ ಕೇರಳ ಮೂಲದ ಲಕ್ಷಾಂತರ ಯುವಕ- ಯುವತಿಯರು ನೆಮ್ಮದಿಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಅವರು ಮರೆಯಬಾರದು. ಕೇರಳ ಒಂದು ರಾಜ್ಯವಾಗಿ ಎಷ್ಟು ಬೇಕಾದರೂ ಬಂಡವಾಳ ಆಕರ್ಷಿಸಲಿ. ಆ ಸ್ವಾತಂತ್ರ್ಯ ಅವರಿಗಿದೆ. ಅದು ಬಿಟ್ಟು ಕ್ಷುಲ್ಲಕ ರಾಜಕಾರಣ ಸರಿಯಲ್ಲ ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.
ಐ.ಟಿ ವರಮಾನ ಮತ್ತು ರಫ್ತು ವಹಿವಾಟಿನಲ್ಲಿ ಕರ್ನಾಟಕವು ದೇಶಕ್ಕೇ ಮೊದಲ ಸ್ಥಾನದಲ್ಲಿದ್ದು, ನಮ್ಮಲ್ಲಿ ಕೈಗಾರಿಕಾ ಸ್ನೇಹಿ ನೀತಿಗಳಿವೆ. ಇಲ್ಲಿರುವಷ್ಟು ಜಾಗತಿಕ ಮಟ್ಟದ ಕಂಪನಿಗಳು ಬೇರೆಲ್ಲೂ ಇಲ್ಲ. ಹೀಗಾಗಿ ಬೆಂಗಳೂರು ಕಳೆದ ಎರಡೂವರೆ ದಶಕಗಳಲ್ಲಿ ದೇಶದ ಹೊಸ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಆದರೆ ಕೇರಳಕ್ಕೆ ಇಂತಹ ಸಾಧನೆ ಸಾಧ್ಯವಾಗಿಲ್ಲ. ನೀರಿನ ಕೊರತೆಯನ್ನೇ ಮುಂದಿಟ್ಟುಕೊಂಡು ಇನ್ನೊಬ್ಬರ ಅವಕಾಶಗಳನ್ನು ಕಸಿದುಕೊಳ್ಳುತ್ತೇವೆ ಎನ್ನುವ ಚಿಂತನೆ ಅತ್ಯಂತ ಅಪಾಯಕಾರಿಯಾದುದು ಎಂದು ಎಂ.ಬಿ ಪಾಟೀಲ್ ಉತ್ತರಿಸಿದ್ದಾರೆ.