ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದೆ. ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳ ಕಾಲ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಗೆ ಮುಂದಿನ 48 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿಗೆ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಸಹ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ರಾಯಚೂರು, ಯಾದಗಿರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಿಗೆ ಮತ್ತು ನಾಳೆ ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎರಡು ದಿನ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ನಿರಂತರ ಗಾಳಿ ಪ್ರತಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ಇರಲಿದ್ದು, ಅಲ್ಲಿ ಸಹ ಹೆಚ್ಚಿನ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ:ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ:ಹಳದಿ ಮತ್ತು ಕೆಂಪು ಕ್ಯಾಪ್ಸಿಕಂ ಬೆಳೆ ಬೆಳೆದು ಮಾದರಿಯಾದ ನಿವೃತ್ತ ಪೊಲೀಸ್ ಅಧಿಕಾರಿ! - CAPSICUM CROP AND GOOD RETURNS