ಹವಾಮಾನ ಕೇಂದ್ರದ ನಿರ್ದೇಶಕ ಸಿ. ಎಸ್ ಪಾಟೀಲ್ (ETV Bharat) ಬೆಂಗಳೂರು :ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊಂಚ ತಗ್ಗಿದಂತೆ ಕಂಡು ಬಂದಿದೆ. ಆದರೂ ಕೆಲ ಭಾಗಗಲ್ಲಿ ಮಳೆ ಮುಂದುವರೆದಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ಸಂಜೆಯಿಂದ ನಾಳೆ ಮಧ್ಯಾಹ್ನದವರೆಗೆ ಆರೆಂಜ್ ಮತ್ತು ಮುಂದಿನ ನಾಲ್ಕು ದಿನ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಇಂದಿನಿಂದ ಐದು ದಿನ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದಂತೆ ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ ಜಿಲ್ಲೆಗೆ ಇಂದು ಮತ್ತು ಜುಲೈ 25 ರಿಂದ 27 ರವರೆಗೆ, ಕಲ್ಬುರ್ಗಿ ಜಿಲ್ಲೆಗೆ 25 ಮತ್ತು 27 ರಂದು, ಬೀದರ್ ಜಿಲ್ಲೆಗೆ ಜುಲೈ 25 ಕ್ಕೆ, ಯಾದಗಿರಿ ಜಿಲ್ಲೆಗೆ ಜುಲೈ 27 ರಂದು ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯಲ್ಲಿ ನಾಳೆ ಮಧ್ಯಾಹ್ನದವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲಿನ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಗಾಳಿ ಬೀಸಲಿದೆ. ಇನ್ನು ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಪ್ರತಿ ಗಂಟೆಗೆ 40 ರಿಂದ 50 ಕೀ ಮೀ ವೇಗದಲ್ಲಿ ನಿರಂತರ ಗಾಳಿ ಇರಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ಜೊತೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ಆಕಾಶ : ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರವಾದ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
'ದಕ್ಷಿಣ ಗುಜರಾತ್-ಕೇರಳ ತೀರದಲ್ಲಿನ ಸರಾಸರಿ ಸಮುದ್ರ ಮಟ್ಟದ ಆಫ್-ಶೋರ್ ಟ್ರಫ್ ದಕ್ಷಿಣ ಗುಜರಾತ್-ಉತ್ತರ ಕರ್ನಾಟಕ ಕರಾವಳಿಯಲ್ಲಿ ಹಾದು ಹೋಗುತ್ತಿದೆ. ಇದರ ಪರಿಣಾಮ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಇಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗಿದೆ. ನಿನ್ನೆಯಿಂದ ಅತಿ ಹೆಚ್ಚು ಮಳೆ 15 ಸೆ. ಮೀ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ನಲ್ಲಿ ದಾಖಲಾಗಿದೆ' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ. ಎಸ್ ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ :ಕರಾವಳಿ, ಮಲೆನಾಡಿನಲ್ಲಿ ಮುಂಗಾರು ತಗ್ಗುವ ಲಕ್ಷಣ: ಕೆಲ ಜಿಲ್ಲೆಗಳಿಗೆ ಮಾತ್ರ ಅಲರ್ಟ್ ಘೋಷಣೆ - Karnataka Weather Forecast