ಬೆಂಗಳೂರು:ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಅವಾಂತರ ಸೃಷ್ಟಿಸಿದ್ದ ಮುಂಗಾರು ಮಳೆ ಕೊಂಚ ತಗ್ಗುವ ಲಕ್ಷಣಗಳು ಕಂಡು ಬರುತ್ತಿದೆ. ಮುಂದಿನ ಕೆಲ ದಿನಗಳ ಕಾಲ ವರ್ಷಧಾರೆ ಪ್ರಮಾಣ ಇಳಿಮುಖವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೂ ಕೆಲ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 5 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡಿನ ಚಿಕ್ಕಮಗಳೂರು, ಕೊಡಗು ಶಿವಮೊಗ್ಗ ಜಿಲ್ಲೆಗಳಿಗೆ ಅಲರ್ಟ್ ಮುಂದುವರೆಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಸೋಮವಾರ ಆರೆಂಜ್ ಅಲರ್ಟ್ ನೀಡಲಾಗಿದ್ದು, ಮುಂದಿನ 4 ದಿನವೂ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಿಗೆ 5 ದಿನಗಳೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಮತ್ತು ಜುಲೈ 25 ಮತ್ತು 26ರಂದು, ಕಲಬುರಗಿ ಜಿಲ್ಲೆಗೆ ಇಂದು ಮತ್ತು ಜುಲೈ 26ಕ್ಕೆ, ಬೀದರ್ ಜಿಲ್ಲೆಗೆ ಜುಲೈ 25ರಂದು ಮತ್ತು ಯಾದಗಿರಿ ಜಿಲ್ಲೆಗೆ ಜುಲೈ 26ರಂದು ಯೆಲ್ಲೋ ಅಲರ್ಟ್ ಇದೆ.
ಇನ್ನೂ 5 ದಿನ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ತಲುಪಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿಯೂ ಬೀಸಲಿದೆ. ಒಳನಾಡಿನ ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಗಾಳಿಯೂ ವೇಗವಾಗಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.