ಕರ್ನಾಟಕ

karnataka

ETV Bharat / state

ವರುಣನ ಆರ್ಭಟ: ಕರಾವಳಿಯಲ್ಲಿ 5 ದಿನಗಳ ಕಾಲ ಅಲರ್ಟ್ ಘೋಷಣೆ - Coastal Karnataka Rain Alert - COASTAL KARNATAKA RAIN ALERT

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

rain
ಮಳೆ (ETV Bharat)

By ETV Bharat Karnataka Team

Published : Jul 7, 2024, 6:04 PM IST

ಬೆಂಗಳೂರು:ರಾಜ್ಯದ ಕರಾವಳಿಯಲ್ಲಿ ಮುಂಗಾರು ವರ್ಷಧಾರೆ ಅಬ್ಬರಿಸುತ್ತಿದ್ದು, ಮುಂದಿನ ಐದು ದಿನಕ್ಕೆ ಅನ್ವಯವಾಗುವಂತೆ ಹವಾಮಾನ ಇಲಾಖೆ ಭಾರಿ ಮಳೆ ಎಚ್ಚರಿಕೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು, ನಾಳೆ ಮತ್ತು ಜುಲೈ 10 ಮತ್ತು 11ರಂದು ಆರೆಂಜ್ ಅಲರ್ಟ್​​ ಹಾಗೂ ಜುಲೈ 9ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿಗೆ ಇಂದು, ನಾಳೆ ಮತ್ತು ಜುಲೈ 10ರಂದು, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಇಂದು, ನಾಳೆ ಹಾಗೂ ಯಾದಗಿರಿ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಆರೆಂಜ್, ನಾಳೆ ಮತ್ತು ಜುಲೈ 10ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯು ಪ್ರತಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು, ಹಲವೆಡೆ ಧಾರಾಕಾರ ಮಳೆ ಬೀಳಲಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ನಿರಂತರ ಗಾಳಿ ಮತ್ತು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಜೊತೆಗೆ, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಬಹುದಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

''ಸರಾಸರಿ ಸಮುದ್ರ ಮಟ್ಟದಲ್ಲಿರುವ ಆಫ್- ಕೇರಳ ಟ್ರಫ್ ಈಗ ದಕ್ಷಿಣ ಗುಜರಾತ್-ಕರ್ನಾಟಕ ಕರಾವಳಿಯಲ್ಲಿ ಹಾದು ಹೋಗುತ್ತಿದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಆದ್ದರಿಂದ ನೈಋತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದು, ಒಳನಾಡಿನಲ್ಲಿ ಸಾಧಾರಣವಾಗಿದೆ. ಇಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಬಿದ್ದಿದೆ. ನಿನ್ನೆಯಿಂದ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್​ ರಾಕ್​ನಲ್ಲಿ ಅತಿ ಹೆಚ್ಚು 21 ಸೆ.ಮೀ. ಮಳೆ ದಾಖಲಾಗಿದೆ'' ಎಂದು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ:ಚಾರ್ಮಾಡಿ ಘಾಟ್​​ನಲ್ಲಿ ಪ್ರವಾಸಿಗರ ಆಕರ್ಷಿಸುತ್ತಿರುವ ಜಲವೈಭವ: ವಿಡಿಯೋ - Falls In Charmadi Ghat

ABOUT THE AUTHOR

...view details