ಸಡಗರ ಸಂಭ್ರಮದಿಂದ ಜರುಗಿದ ಶ್ರೀ ಸಿದ್ದಾರೂಢ ರಥೋತ್ಸವ ಹುಬ್ಬಳ್ಳಿ:ಉತ್ತರ ಕರ್ನಾಟಕ ಭಾಗದ ಜನರ ಆರಾಧ್ಯದೈವ ಶ್ರೀ ಸಿದ್ಧಾರೂಢ ಸ್ವಾಮಿ ರಥೋತ್ಸವ ಲಕ್ಷಾಂತರ ಭಕ್ತರ ಹರ್ಷೋದ್ಘಾರದ ನಡುವೆ ಸಂಭ್ರಮದಿಂದ ಶನಿವಾರ ನಡೆಯಿತು. ಸಿದ್ಧಾರೂಢರ ರಥ ದೇವಸ್ಥಾನದ ಮುಖ್ಯ ಬೀದಿಯಲ್ಲಿ ಸಾಗುತ್ತಿದ್ದಂತೆಯೇ ಭಕ್ತಾದಿಗಳು ಉತ್ತತ್ತಿ, ಬಾಳೆಹಣ್ಣು, ನಿಂಬೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನಸಾಗರ ರಥೋತ್ಸವ ನೋಡಿ ಕಣ್ತುಂಬಿಕೊಂಡಿತು.
ಓಂ ನಮಃ ಶಿವಾಯ, ಹರ ಹರ ಮಹಾದೇವ ಉದ್ಗಾರ: ಡೊಳ್ಳು, ಬ್ಯಾಂಜೋ ಸೇರಿದಂತೆ ವಿವಿಧ ವಾದ್ಯ- ಮೇಳಗಳೊಂದಿಗೆ ಸಾಗಿದ ಯುವ ಸಮೂಹ ನೃತ್ಯ ಮಾಡುವ ಮೂಲಕ ಜಾತ್ರೆಯ ಸಂಭ್ರಮವನ್ನು ಇಮ್ಮಡಿಗೊಳಿಸಿತು. ತೇರು ಮುಂದೆ ಸಾಗುತ್ತಿದ್ದಂತೆ ಓಂ ನಮಃ ಶಿವಾಯ, ಹರ ಹರ ಮಹಾದೇವ ಎಂಬ ಉದ್ಗಾರ ಭಕ್ತಿಲೋಕ ಧರೆಗಿಳಿಸಿದಂತೆ ಭಾಸವಾಯಿತು. ಇನ್ನು ಜಾತ್ರೆಗೆ ಲಕ್ಷಾಂತರ ಭಕ್ತರ ದಂಡು ಭಾಗಿಯಾಗಿದ್ದು, ಸಂಜೆ 5.30 ಗಂಟೆಗೆ ಸಲ್ಲುವ ಶುಭಮುಹೂರ್ತದಲ್ಲಿ ಶ್ರೀ ಸಿದ್ಧಾರೂಢ ಹಾಗೂ ಗುರುನಾಥಾರೂಢರ ಉತ್ಸವ ಮೂರ್ತಿಗಳನ್ನ ಅಲಂಕೃತ ತೇರಿನಲ್ಲಿಟ್ಟು ಎಳೆಯಲಾಯಿತು.
ಜಾತಿ, ಧರ್ಮದ ಸಂಕೋಲೆಗಳನ್ನು ಮೀರಿ ಸರ್ವ ಜನಾಂಗದವರು ರಥೋತ್ಸವದಲ್ಲಿ ಭಾಗಿಯಾಗಿದ್ದರು. ಟೆಂಪೋ, ಟ್ರ್ಯಾಕ್ಟರ್, ದ್ವಿಚಕ್ರ, ಕಾರುಗಳಲ್ಲಿ ಮಾತ್ರವಲ್ಲದೇ, ಪಾದಯಾತ್ರೆ ಮೂಲಕವೂ ರಾಜ್ಯದ ವಿವಿಧ ಭಾಗದಿಂದ ಲಕ್ಷಾಂತರ ಭಕ್ತರು ಜಾತ್ರೆಗೆ ಬಂದಿದ್ರು. ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಾಗಿತ್ತು. ಶಿವರಾತ್ರಿ ನಿಮಿತ್ತ ವಿಶೇಷ ಕಳೆ ಪಡೆದಿದ್ದ ಶ್ರೀಮಠ, ದೀಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು. ಇನ್ನು ಮಹಾರಾಷ್ಟ್ರ, ಆಂಧ್ರ ಪ್ರದೇಶ, ಗೋವಾ ಸೇರಿದಂತೆ ರಾಜ್ಯದ ಹುಬ್ಬಳ್ಳಿ - ಧಾರವಾಡ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಕಲಬುರಗಿ, ಹಾವೇರಿ, ಗದಗ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ರು.
ಮಹಾರಥೋತ್ಸವದ ನಿಮಿತ್ತ ಸುಮಾರು 70 ಅಡಿ ಎತ್ತರದ ತೇರನ್ನ ಶೃಂಗರಿಸಲಾಗಿತ್ತು. ಮಠದ ಆವರಣದಿಂದ ಹೊರಟ ತೇರು ಮಹಾದ್ವಾರದವರೆಗೆ ತಲುಪಿ ಮತ್ತೆ ಮಠಕ್ಕೆ ಮರಳಿತು. ಇನ್ನು ಜಾತ್ರೆಗೆ ಬರುವ ಭಕ್ತರು ತಮ್ಮ ವಾಹನಗಳನ್ನು ನಿಲ್ಲಿಸಲು ಶ್ರೀನಿವಾಸ ನಗರದ ಉದ್ಯಾನದ ಬಳಿ, ಅಂಬೇಡ್ಕರ್ ಕ್ರೀಡಾಂಗಣ, ಆನಂದನಗರ ರಸ್ತೆಗೆ ಹೊಂದಿಕೊಂಡು ವ್ಯವಸ್ಥೆ ಮಾಡಲಾಗಿತ್ತು. ಉತ್ತರ ಕರ್ನಾಟಕದ ಜಾತ್ರಾ ಮಹೋತ್ಸವಗಳಲ್ಲಿ ಒಂದಾದ ಸಿದ್ಧಾರೂಢ ಮಠಕ್ಕೆ ಬರುವ ಭಕ್ತರಿಗೆ ಊಟ, ಉಪಹಾರದ ಉಚಿತ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.
ಓದಿ:ಸಿದ್ಧಾರೂಢರ ಮಹಾರಥೋತ್ಸವ: ಮಠಕ್ಕೆ ಆಗಮಿಸುವ ಭಕ್ತರಿಗೆ ಆಟೋ ಸೇವೆ ಉಚಿತ, ಇಂದು 5 ಲಕ್ಷ ಜನ ಸೇರೋ ಸಾಧ್ಯತೆ