ಬೆಂಗಳೂರು:ಬೆಂಗಳೂರಿನ ತ್ಯಾಜ್ಯ ನೀರನ್ನು ಸಂಸ್ಕರಿಸಿ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್. ಎಸ್ ಬೋಸರಾಜು ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಜಲಮಂಡಳಿ ವತಿಯಿಂದ ನೀರು ಸಂಸ್ಕರಣಾ ಘಟಕ ನಿರ್ಮಿಸಲಾಗುತ್ತಿದೆ. 40 ಎಂಎಲ್ಡಿ ನೀರನ್ನು ಸರಬರಾಜು ಮಾಡಲಾಗುವುದು. ಈ ಬಗ್ಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ ಎಂದರು.
ಇದಕ್ಕೂ ಮುನ್ನ ಮಾತನಾಡಿದ ಶರತ್ ಬಚ್ಚೇಗೌಡ, ನೀರು ಪೂರೈಕೆ ಮಾರ್ಗಗಳ ನಿರ್ಮಾಣಕ್ಕೆ ಈಗಲೇ ಚಾಲನೆ ಕೊಟ್ಟರೆ ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.
ಈಗಾಗಲೇ ಆದೇಶ :ಮಹರ್ಷಿ ವಾಲ್ಮೀಕಿ ಆದಿವಾಸಿ ವಸತಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ದೊರಕದೆ ಇರುವ ಶಾಲೆಗಳಲ್ಲಿ ಮಾತ್ರ ಶೇ.50ರ ಪ್ರಮಾಣದಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಹಾಗೂ ಶೇ.50ರ ಪ್ರಮಾಣದಲ್ಲಿ ಪರಿಶಿಷ್ಟ ಜಾತಿ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಭಾಗೀರಥಿ ಮುರುಳ್ಯ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಪರವಾಗಿ ಉತ್ತರಿಸಿದರು.