ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಸಂಪುಟ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಬಹುದೇ ಅಥವಾ ತಿರಸ್ಕರಿಸಬೇಕೆ ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಎ ಬಗ್ಗೆ ಇದುವರೆಗೂ ಚರ್ಚೆಯಾಗಿಲ್ಲ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಂಪುಟದ ಇತರ ಸಚಿವರುಗಳು ಚರ್ಚೆ ನಡೆಸಿ, ಅದನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಬೇಕೇ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿಗಳು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿ, ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಆದರೆ, ಯಾವ ರೀತಿ ಎಂದು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದು ತಿಳಿಸಿದರು.
ಖರ್ಗೆ ಕಲಬುರಗಿ ಲೋಕಸಭಾ ಚುನಾವಣೆಯಿಂದ ಸ್ಪರ್ಧೆ ಮಾಡಿದರೆ ಪಕ್ಷಕ್ಕೆ ಹೆಚ್ಚಿನ ಬಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿ ಲೋಕಸಭಾ ಚುನಾವಣೆಯಿಂದ ಸ್ಪರ್ಧೆ ಮಾಡಿದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ. ಖರ್ಗೆಯವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಸ್ಪರ್ಧೆಯ ಬಗ್ಗೆ ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಇದರಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅವರು ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಅವರ ಜೊತೆಯಲ್ಲಿರುತ್ತೇವೆ ಎಂದರು.