ಬೆಂಗಳೂರು :ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಹೆಚ್. ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪ್ರಗತಿ ಪರಿಶೀಲಿಸುವಂತೆ ನಿರ್ದೇಶನ ನೀಡಿದರು.
ಸಂವಿಧಾನಾತ್ಮಕ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದ್ದು, ಸರ್ಕಾರದ ಜವಾಬ್ದಾರಿಯಾಗಿದೆ. ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಹಾಗೂ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಇಲಾಖೆಗಳ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.