ಬೆಂಗಳೂರು : 'ಬಗರ್ ಹುಕುಂ' ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಅವರು, 'ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಈಗಲೂ ಮೀನಾಮೇಷ ಎಣಿಸುವುದು ಸರಿಯಲ್ಲ. ಹೀಗಾಗಿ ಎಲ್ಲಾ ತಹಶೀಲ್ದಾರರಿಗೆ ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ಎರಡು ತಿಂಗಳ ಗಡುವು ನೀಡುತ್ತಿದ್ದು, ಈ ಅವಧಿಯಲ್ಲೂ ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟಿಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು' ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.
ಅರ್ಹ ಭೂಹೀನರಿಗೆ ಜಮೀನು ಮಂಜೂರು ಮಾಡಬೇಕು ಎಂಬುದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಕ್ರಮ ಸಕ್ರಮ ಯೋಜನೆಯ ಅಡಿ “ಬಗರ್ ಹುಕುಂ” ಅರ್ಜಿ ಆಹ್ವಾನಿಸಲಾಯಿತು. ಅಲ್ಲದೆ, ಕಳೆದ ಒಂದು ವರ್ಷದಿಂದ ಸ್ವತಃ ನಾನು ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡುತ್ತಾ, ಬಗರ್ ಹುಕುಂ ಸಂಬಂಧಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೂ, ಕೆಲವು ಅಧಿಕಾರಿಗಳ ಕೆಲಸ ತೃಪ್ತಿಕರವಾಗಿಲ್ಲ. ಬಡವರ, ರೈತರ ಪರ ಕೆಲಸ ಮಾಡಲು ಅಸಡ್ಡೆ ತೋರುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡಲು ಅಧಿಕಾರಿಗಳಿಗಿರುವ ಸಮಸ್ಯೆ ಏನು? ಒಂದು ವರ್ಷದ ನಂತರವೂ ಅಧಿಕಾರಿಗಳು ಈ ಬಗ್ಗೆ ತಡ ಮಾಡುವುದರಲ್ಲಿ ಅರ್ಥವಿಲ್ಲ. ನಮೂನೆ 50, 53 ಮತ್ತು 57ರ ಅಡಿಯಲ್ಲಿ 14 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಅನರ್ಹ ಅರ್ಜಿಗಳೇ ಬಹುಪಾಲಿವೆ. ಹೀಗಾಗಿ ಅಧಿಕಾರಿಗಳು ತಮ್ಮ ವಿವೇಚನೆಯ ಮೇಲೆ ಅನರ್ಹ ಅರ್ಜಿಗಳನ್ನು ಅನೂರ್ಜಿತಗೊಳಿಸಿ, ಅರ್ಹರಿಗೆ ಶೀಘ್ರ ಜಮೀನು ಮಂಜೂರು ಮಾಡಬೇಕು. ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಈ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದೇ ತಿಂಗಳ ಅಂತ್ಯದಲ್ಲಿ ಮತ್ತೊಂದು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಅರ್ಹರ ಗ್ರ್ಯಾಂಟ್ಗೆ ವಿಳಂಬ ಬೇಡ :ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡಲು ವಿಳಂಬ ಧೋರಣೆ ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈವರೆಗೆ ಎಷ್ಟು ಜನರ ಅರ್ಜಿಗಳು ಅರ್ಹ ಎಂದು ಅಧಿಕಾರಿಗಳು ಗುರುತಿಸಿದ್ದೀರೋ ಆ ಎಲ್ಲರಿಗೂ ಮುಂದಿನ ಒಂದೆರಡು ವಾರದಲ್ಲಿ ಸಾಗುವಳಿ ಚೀಟಿ ನೀಡಿ. ಬಗರ್ ಹುಕುಂ ಕಮಿಟಿ ಸಭೆ ನಡೆಸಲು ಶಾಸಕರು ಸಮಯ ನೀಡದಿದ್ದರೆ ದಯವಿಟ್ಟು ನನಗೆ ತಿಳಿಸಿ. ನಾನು ಅವರ ಜೊತೆ ಮಾತನಾಡಿ ಸಮಯ ನಿಗದಿಗೊಳಿಸುತ್ತೇನೆ'' ಎಂದು ಆಶ್ವಾಸನೆ ನೀಡಿದರು.
ಇದೇ ಸಂದರ್ಭದಲ್ಲಿ ಗುಂಡ್ಲುಪೇಟೆ ತಾಲೂಕಿನಲ್ಲಿ ಈಗಾಗಲೇ 15 ಅರ್ಹ ಫಲಾನುಭವಿಗಳನ್ನು ಗುರುತಿಸಿ ಭೂ ಮಂಜೂರು ಮಾಡಲಾಗಿದ್ದು, ತಹಶೀಲ್ದಾರರ ಕೆಲಸಕ್ಕೆ ಸಚಿವರು ಮೆಚ್ಚುಗೆ ಸೂಚಿಸಿದರು. ಅಲ್ಲದೆ, ಉಳಿದ ಅರ್ಜಿಗಳನ್ನೂ ಶೀಘ್ರ ವಿಲೇವಾರಿಗೊಳಿಸುವಂತೆ ಸೂಚಿಸಿದರು.
‘ವಿಎ’ ಗಳನ್ನು ಅನಗತ್ಯವಾಗಿ ಫೀಲ್ಡ್ಗೆ ಕಳುಹಿಸಬೇಡಿ :ಗ್ರಾಮ ಆಡಳಿತ ಅಧಿಕಾರಿಗಳಿಗೆ ಈಗಾಗಲೇ ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ ಅವರನ್ನು ಅನಗತ್ಯವಾಗಿ ಫೀಲ್ಡ್ಗೆ ಕಳುಹಿಸಬೇಡಿ ಎಂದು ತಹಶೀಲ್ದಾರರಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು ಮಾಡಿದರು.