ದಾವಣಗೆರೆ:ಹಿಂಗಾರು ಹಾಗು ಮುಂಗಾರು ಮಳೆ ರಾಜ್ಯದಲ್ಲಿ ಭಾರಿ ನಷ್ಟ ಉಂಟು ಮಾಡಿದ್ದು, ಜನ ಮನೆ ಕಳೆದುಕೊಂಡಿದ್ದರೆ, ರೈತರ ಬೆಳೆ ನೆಲಕಚ್ಚಿದೆ. ಅಲ್ಲದೆ ಒಟ್ಟು 21 ಜನ ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದೆಲ್ಲೆಡೆ ಮಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವ ಕಾರ್ಯ ಕೈಗೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ಇಂದು ದಾವಣಗೆರೆಗೂ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದರು.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಕೆರೆ, ಭರಮಸಮುದ್ರ, ಉಚ್ಚಂಗಿಪುರ, ದೊಣ್ಣೆಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಮಳೆಹಾನಿ ಪ್ರದೇಶವನ್ನು ಪರಿಶೀಲನೆ ನಡೆಸಿದರು. ಮಳೆಯಿಂದ ಮನೆಹಾನಿ, ಬೆಳೆಹಾನಿಯಾಗಿರುವ ಬಗ್ಗೆ ವೀಕ್ಷಿಸಿದರು. ಜೊತೆಗೆ ಆಯಾಯ ಮಾಲೀಕರಿಗೆ ಪರಿಹಾರ ಹಾಗು ಮನೆ ಕಟ್ಟಿಕೊಳ್ಳಲು ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಬಳಿಕ ಮೆಕ್ಕೆಜೋಳ ಜಮೀನಿಗೆ ತೆರಳಿ ರೈತರ ನೋವನ್ನು ಅಲಿಸಿದ್ದಾರೆ. ಮನೆ ಬಿದ್ದಿರುವುದನ್ನು ಗಮನಿಸಿ ಮನೆಗಳನ್ನು ಮಂಜೂರು ಮಾಡುವಂತೆ ಗ್ರಾಮ ಲೆಕ್ಕಾಧಿಕಾರಿಗಳಿಗೆ ತಿಳಿಸಿದರು.
ಮಳೆಯಿಂದ ದಾವಣಗೆರೆ ಜಿಲ್ಲೆಯಲ್ಲಿ ಆಗಿರುವ ಹಾನಿ ಎಷ್ಟು?:ಪರಿಶೀಲನೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು,"ದಾವಣಗೆರೆ ಜಿಲ್ಲೆಯಲ್ಲಿ ಮಾರ್ಚ್‍ನಿಂದ ಮೇವರೆಗೆ ಜಿಲ್ಲೆಯಲ್ಲಿ 1 ಮನೆ ಸಂಪೂರ್ಣ ಹಾನಿಯಾಗಿದ್ದು, 35 ಮನೆಗಳು ಭಾಗಶಃ ಹಾನಿಯಾಗಿವೆ. 25 ಕುರಿಗಳು ಸಾವನ್ನಪ್ಪಿವೆ. 251.8 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಈಗಾಗಲೇ ರೂ.11.24 ಲಕ್ಷ ಪರಿಹಾರ ನೀಡಲಾಗಿದೆ. ಜೂನ್ನಿಂದ ಸೆಪ್ಟೆಂಬರ್ವರೆಗೆ ಸುರಿದ ಮಳೆಯಿಂದ 5 ಹಸುಗಳು, 17 ಕುರಿಗಳು ಮೃತಪಟ್ಟಿದ್ದು ರೂ.2.71 ಲಕ್ಷ ಪರಿಹಾರ ನೀಡಲಾಗಿದೆ. ಅಲ್ಲದೆ ಮನೆಗಳಲ್ಲಿ 85 ಪೂರ್ಣಹಾನಿ, 97 ಭಾಗಶಃ ಹಾನಿ, 109 ಅಲ್ಪ ಹಾನಿಯಾಗಿದ್ದು ಒಟ್ಟು 1,83,20,000 ರೂ.ಗಳ ಪರಿಹಾರ ನೀಡಲಾಗಿದೆ. ಹಾನಿಯಾದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ರೂ. 2,14,95,000ಗಳನ್ನು ಒದಗಿಸಲಾಗಿದೆ" ಎಂದು ತಿಳಿಸಿದರು.
"ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ನಲ್ಲಿ ಮನೆ ಗೋಡೆ ಬಿದ್ದು ಮೃತರಾದವರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ನೀಡಲಾಗಿದೆ. ನ್ಯಾಮತಿ ತಾಲ್ಲೂಕಿನಲ್ಲಿ ಹಳ್ಳದಲ್ಲಿ ಕೊಚ್ಚಿ ಮೃತರಿಗೆ ವರದಿ ಬಂದ ತಕ್ಷಣ ಪರಿಹಾರ ಒದಗಿಸಲಾಗುತ್ತದೆ. 4 ಹಸುಗಳು, 16 ಕುರಿಗಳು ಮರಣ ಹೊಂದಿದ್ದು ರೂ.2.13 ಲಕ್ಷ ಪರಿಹಾರ ನೀಡಲಾಗಿದೆ. ಸಮೀಕ್ಷೆ ನಡೆಯುತ್ತಿದ್ದು ಸಮೀಕ್ಷೆ ನಂತರ ಪರಿಹಾರ ನೀಡಲಾಗುತ್ತದೆ. ಜಿಲ್ಲೆಯ ಎಲ್ಲ ತಹಶೀಲ್ದಾರರ ಖಾತೆಯಲ್ಲಿ ರೂ.1.68 ಕೋಟಿ ಮತ್ತು ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ರೂ.10.60 ಕೋಟಿ ಹಣ ಲಭ್ಯವಿದೆ" ಎಂದು ಮಾಹಿತಿ ನೀಡಿದರು.