ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಎಚ್ಚರಿಸಿದ ಅವರು, ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿದೆ. ಪಿಎಸ್ಐ ಪರೀಕ್ಷೆಯಲ್ಲಿ ನಡೆದ ಅಕ್ರಮ ಇಡೀ ವ್ಯವಸ್ಥೆಯೇ ತಲೆತಗ್ಗಿಸುವಂತಹ ಕೃತ್ಯವಾಗಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆಯಲ್ಲಿ ಇಂತಹ ಯಾವ ಅಕ್ರಮಗಳಿಗೂ ಅಧಿಕಾರಿಗಳು ಅವಕಾಶ ನೀಡಬಾರದು ಎಂದು ತಾಕೀತು ಮಾಡಿದರು.
ರಾಜ್ಯಾದ್ಯಂತ ಒಟ್ಟಾರೆ 4.71 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಹಿಂದೆ ಮೂರು ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದೆ ದೊಡ್ಡ ಸಂಖ್ಯೆಯಾಗಿತ್ತು. ಆದರೆ, ಈ ವರ್ಷ ಕೆಲಸದ ಆಕಾಂಕ್ಷಿ ಯುವಕರ-ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿದ್ದು, ನ್ಯಾಯಯುತವಾಗಿ ಪರೀಕ್ಷೆ ನಡೆಸಬೇಕಾದ ಹಾಗೂ ಅರ್ಹರಿಗೆ ಕೆಲಸ ಲಭ್ಯವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ 40 ಕೇಂದ್ರಗಳಲ್ಲಿ ಪರೀಕ್ಷೆ ನಡೆದರೆ, ಕೆಲವು ಜಿಲ್ಲೆಗಳಲ್ಲಿ ಗರಿಷ್ಠ 86 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕಿದೆ ಎಂದು ಕಿವಿಮಾತು ಹೇಳಿದರು.
ಪಶ್ನೆ ಪತ್ರಿಕೆಗಳು ಜಿಲ್ಲಾ ಟ್ರಷರಿಯಲ್ಲಿದ್ದಾಗ ಅಥವಾ ಟ್ರಷರಿಯಿಂದ ಪರೀಕ್ಷಾ ಕೇಂದ್ರಗಳಿಗೆ ಸಾಗುವ ದಾರಿಯಲ್ಲೇ ಸೋರಿಕೆಯಾದ ಹಲವು ಪ್ರಕರಣಗಳು ನಮ್ಮ ಮುಂದಿವೆ. ಆದರೆ, ಈ ವರ್ಷ ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಲು ಅವಕಾಶ ನೀಡಬಾರದು. ಪೊಲೀಸ್ ಇಲಾಖೆ ಬಿಗಿ ಭದ್ರತೆ ಒದಗಿಸಬೇಕು ಎಂದು ಸೂಚಿಸಿದರು.
ಮೈಕ್ರೋ ಡಿಟೆಕ್ಟರ್‌ಗಳ ಮೂಲಕ ಪರೀಕ್ಷಿಸಬೇಕು:ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರು ಹೊಸ ಹೊಸ ಮೋಸದ ಮಾರ್ಗಗಳನ್ನು ಶೋಧಿಸುತ್ತಿದ್ದಾರೆ. ನಾವು ಚಾಪೆ ಕೆಳಗೆ ನುಸುಳಿದರೆ ರಂಗೋಲಿ ಕೆಳಗೆ ನುಸುಳುವ ಕಳ್ಳರೂ ಇದ್ದಾರೆ. ಅಧಿಕಾರಿಗಳು ಇಂತಹ ಪ್ರಮಾದಗಳಿಗೂ ಸಿದ್ದವಾಗಿರಬೇಕು. ಹೀಗಾಗಿ, ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವ ಪ್ರತಿಯೊಬ್ಬ ಅಭ್ಯರ್ಥಿಗಳನ್ನೂ ಮೈಕ್ರೋ ಡಿಟೆಕ್ಟ್ ಮೂಲಕ ಪರೀಕ್ಷಿಸಬೇಕು. ಗುಲ್ಬರ್ಗಾ, ಯಾದಗಿರಿ ಹಾಗೂ ಬಿಜಾಪುರ ಜಿಲ್ಲೆಗಳನ್ನು ಸೂಕ್ಷ್ಮ ಜಿಲ್ಲೆಗಳು ಎಂದು ಗುರುತಿಸಿದ್ದು, ಈ ಭಾಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಬೇಕು. ಅಗತ್ಯವಿದ್ದರೆ ಮೀಸಲು ಪೊಲೀಸ್ ಪಡೆ, ಹೋಮ್ ಗಾರ್ಡ್ ಹಾಗೂ ಪಂಚಾಯತ್-ನಗರಸಭೆ ಅಧಿಕಾರಿಗಳನ್ನೂ ಬಳಸಿಕೊಳ್ಳಬಹುದು. ಅಗತ್ಯ ಹಣಕಾಸು ವ್ಯವಸ್ಥೆ ಒದಗಿಸಲು ಇಲಾಖೆ ಬದ್ಧವಾಗಿದೆ ಎಂದು ಅಧಿಕಾರಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಸನ್ನ ಹೆಚ್ ಉಪಸ್ಥಿತರಿದ್ದರು.
ಇದನ್ನೂ ಓದಿ:ಗ್ರಾಮ ಆಡಳಿತಾಧಿಕಾರಿ ಕನ್ನಡ ಕಡ್ಡಾಯ ಪರೀಕ್ಷೆ ಯಶಸ್ವಿ: ಶೇ.80ರಷ್ಟು ಅಭ್ಯರ್ಥಿಗಳು ಹಾಜರು